ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಸೂಕ್ತ ಪರಿಹಾರ

ಜಗಳೂರು ಶಾಸಕ ಎಸ್.ವಿ.ರಾಮಚಂದ್ರ

ಜಗಳೂರು, ನ.1- ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿರುವ ಬಗ್ಗೆ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಸಮೀಕ್ಷೆ ನಡೆಸುತ್ತಿದ್ದು, ಸರ್ಕಾರದ ವತಿಯಿಂದ ಸೂಕ್ತ ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಶಾಸಕ ಎಸ್.ವಿ. ರಾಮಚಂದ್ರ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ಇಂದು ಏರ್ಪಾಡಾಗಿದ್ದ ಸರಳ ರಾಜ್ಯೋತ್ಸವ ಸಮಾರಂಭದಲ್ಲಿ ಶ್ರೀ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಈ ವರ್ಷ ಅತಿ ಮಳೆಯಿಂದ ರೈತರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ, ಬೆಳೆ ಹಾನಿಯಾಗಿದೆ ಎಂದರು.

ರಾಜ್ಯ ಸರ್ಕಾರ ಘೋಷಿಸಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿ ತಾಲ್ಲೂಕುಗಳ ಪಟ್ಟಿಯಲ್ಲಿ ಜಗಳೂರು ತಾಲ್ಲೂಕು ಸೇರ್ಪಡೆಯಾಗಿದ್ದು ಸಂಕಷ್ಟಕ್ಕೀಡಾದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿಯೂ ಸಹ ಕ್ಷೇತ್ರ ದಲ್ಲಿ ಅಭಿವೃದ್ಧಿ ಕಾಮಗಾರಿಗಳು  ಭರದಿಂದ ಸಾಗಿವೆ. 57 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೊಸದಾಗಿ 240 ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಗು ವುದು ಮತ್ತು ಹೊಸದಾಗಿ ಗ್ರಾಮೀಣ ಪ್ರದೇಶದಲ್ಲಿ 60 ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದರು.

ಪತ್ರಕರ್ತರ ಭವನಕ್ಕೆ 10 ಲಕ್ಷ ರೂ. ಅನುದಾನ: ಈಚೆಗೆ ಗುದ್ದಲಿ ಪೂಜೆ ನೆರವೇರಿಸಿ ರುವ ತಾಲ್ಲೂಕು ಪತ್ರಕರ್ತರ ಭವನಕ್ಕೆ 10 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿರುತ್ತೇನೆ. ಶೀಘ್ರವೇ ನಿರ್ಮಿತಿ ಕೇಂದ್ರದ ವತಿಯಿಂದ ಕಾಮಗಾರಿ ಆರಂಭಿಸಲಾಗುವುದು ಮತ್ತು ಶಿಥಿಲಗೊಂಡಿರುವ ಮಿನಿ ವಿಧಾನಸೌಧದ ಕಟ್ಟಡ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, ಶೀಘ್ರದಲ್ಲಿ ಅನುದಾನ ಬಿಡುಗಡೆ ಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ, ಸಿಪಿಐ ದುರುಗಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್, ಮಂಡಲ್ ಬಿಜೆಪಿ ಅಧ್ಯಕ್ಷ ಹೆಚ್.ಸಿ. ಮಹೇಶ್, ಪ.ಪಂ. ನಾಮನಿರ್ದೇಶನ ಸದಸ್ಯ ಬಿ.ಪಿ. ಸುಭಾನ್  ಮತ್ತಿತರರು ಉಪಸ್ಥಿತರಿದ್ದರು.

error: Content is protected !!