ಡಿಸೆಂಬರ್‌ ಮೊದಲ ವಾರ ಶಾಲಾರಂಭ

ಮೊದಲು 8ರಿಂದ 12ನೇ ತರಗತಿವರೆಗಿನ ಶಾಲಾ ತರಗತಿಗೆ ಸಿದ್ಧತೆ

ಬೆಂಗಳೂರು, ನ. 4 – ಮಾಸಾಂತ್ಯ ಇಲ್ಲವೇ ಡಿಸೆಂಬರ್ ಮೊದಲ ವಾರದಲ್ಲಿ 8 ರಿಂದ 12ನೆ ತರಗತಿವರೆಗಿನ ಶಾಲಾ ತರಗತಿಗಳನ್ನು ಆರಂಭಿಸಲು ಸರ್ಕಾರ ಸಿದ್ದತೆ ನಡೆಸಿದೆ. 

ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಇಂದು ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಶಿಕ್ಷಣ ಮುಖ್ಯಸ್ಥರೊಟ್ಟಿಗೆ ಸಮಾಲೋಚನೆ ನಡೆಸಿದರು. 

ಈ ಸಮಾಲೋಚನೆ ಮೂರು ದಿನಗಳ ಕಾಲ ನಡೆಯುತ್ತಿದ್ದು, ಕೊನೆಯಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಮತ್ತು ಯಾವ ರೀತಿ ಆರಂಭಿಸಬೇಕು ಎಂಬುದರ ಬಗ್ಗೆ ಪೂರ್ಣ ವರದಿ ಸಿದ್ದಪಡಿಸಿ, ಮುಖ್ಯಮಂತ್ರಿಯವರ ಅನುಮೋದನೆಗೆ ಕಳುಹಿಸುವ ತೀರ್ಮಾನ ಕೈಗೊಂಡಿದ್ದಾರೆ. 

ಸದ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ತರಗತಿಗಳು ಆರಂಭವಾಗುವ ಸೂಚನೆಗಳು ಇಲ್ಲ. ಈಗಾಗಲೇ ನವೆಂಬರ್ 17 ರಿಂದ ಪದವಿ ಕಾಲೇಜುಗಳು ಆರಂಭಗೊಳ್ಳುತ್ತಿವೆ. ಅದರ ಬೆನ್ನಲ್ಲೇ ಪ್ರೌಢ ಮತ್ತು ಪದವಿ ಪೂರ್ವ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ದಪಡಿಸುತ್ತಿದೆ. 

ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ತರಗತಿಗಳು ಮುಂದಿನ ಶಿಕ್ಷಣದ ಪ್ರಮುಖ ಅಂಗಗಳಾಗಿವೆ.

ಈ ಹಿನ್ನೆಲೆಯಲ್ಲಿ ತರಗತಿಯಲ್ಲಿ ಶಿಕ್ಷಣ ನೀಡುವುದು ಒಳಿತು ಎಂದು ತಜ್ಞರು ಅಭಿಪ್ರಾಯಿಸಿದ್ದಾರೆ. ಇಂದಿನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್‍ ಕುಮಾರ್, ಶಾಲೆಗಳನ್ನು ಆರಂಭಿಸುವ ಕುರಿತು ಶಿಕ್ಷಕರ ಸಂಘಗಳ ಅಧ್ಯಕ್ಷರ ಜೊತೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮೈಸೂರು, ಚಾಮರಾಜನಗರ, ಹಾಸನ, ಕೊಡಗಿನಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಅಲ್ಲಿ ಸಭೆ ನಡೆದಿದೆ. ಅವರ ಅಭಿಪ್ರಾಯವನ್ನು ಸ್ವೀಕರಿಸಿದ್ದೇವೆ.

ಎಲ್ಲಾ ಬೆಳವಣಿಗೆಗಳನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು, ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಶಾಲಾ ಅಭಿವೃದ್ಧಿ ಸಮಿತಿಗಳ ರಾಜ್ಯ ಮಟ್ಟದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಬಗ್ಗೆಯು ಸರ್ಕಾರಕ್ಕೆ ಮಾಹಿತಿ ಲಭ್ಯವಾಗಿದೆ. ನಾವು ಅವರ ಜೊತೆಯು ಸಮಾಲೋಚನೆ ಮಾಡಿದ್ದೇವೆ ಎಂದವರು ತಿಳಿಸಿದರು.

ಸಭೆಯಲ್ಲಿದ್ದ ಅಧಿಕಾರಿಗಳು ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ. ಮೊದಲ ಹಂತದಲ್ಲಿ 8 ರಿಂದ 12ನೇ ತರಗತಿಗಳನ್ನು ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಅವಧಿ ಮುಗಿದ ನಂತರ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. 

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಾರಂಭಕ್ಕೂ ಮುನ್ನ ಅರ್ಹ ಉಪನ್ಯಾಸಕರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡುವ ಬಗ್ಗೆಯು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

error: Content is protected !!