ಬೆಂಗಳೂರು, ಡಿ. 28- ಈಗಾಗಲೇ ನಿಗದಿಯಾಗಿರುವಂತೆ ಜನವರಿ 1ರಿಂದ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸಚಿವ ಸಂಪುಟ ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳನ್ನು ಜನವರಿ 1ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮೊದಲ ಹಂತದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಲಿವೆ.
ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಶೇ.95ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಈ ಚುನಾವಣೆಗೆ ಕಾಂಗ್ರೆಸ್ನ ಯಾವುದೇ ನಾಯಕರು ಆಸಕ್ತಿ ವಹಿಸಿರಲಿಲ್ಲ ಎಂದು ದೂರಿದರು.
ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮುಂದೆ ಗ್ರಾಮ ಪಂಚಾಯ್ತಿಗೆ ಆಯ್ಕೆಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಗ್ರಾಮಗಳ ಅಭಿವೃದ್ಧಿ ಮಾಡಲು ಸದಸ್ಯರಿಗೆ ಸಹಕಾರ ಕೊಡಲು ಪ್ರಾಮಾಣಿಕ ಕೆಲಸ ಮಾಡುತ್ತೇವೆ ಎಂದು ಹೇಳಿದರು.