ಕೊಟ್ಟೂರು, ಜ. 30 – ತರಳಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಕಾಳಾಪುರ ಗ್ರಾಮದಲ್ಲಿ ನಡೆದ ಘಟನೆ ದುರ್ದೈವದ ಸಂಗತಿ. ವೃದ್ಧರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿ ಮನೆಗಳು, ವಾಹನಗಳನ್ನು ಹಾನಿ ಮಾಡಿರುವುದು ಹೀನಾಯ ಕೃತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ತಾಲ್ಲೂಕಿನ ಉಜ್ಜಯಿನಿ ಪೀಠಕ್ಕೆ ಸೋಮವಾರ ಭೇಟಿ ನೀಡಿ, ಪರಿಸ್ಧಿತಿ ಅವಲೋ ಕಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, 12 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಯಾರೇ ತಪ್ಪಿತಸ್ಧ ರಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಎಸ್ಪಿ ಅವರಿಗೆ ಈಗಾಗಲೇ ಆದೇಶಿಸಿದ್ದೇನೆ. ಈ ಘಟ ನೆಗೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ಶೀಘ್ರದಲ್ಲಿಯೇ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪೀಠಾ ಧೀಶರಾದ ಸಿದ್ಧಲಿಂಗ ಶಿವಾಚಾ ರ್ಯರು, ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಬಿಜೆಪಿ ಜಿಲ್ಲಾ ಘಟಕಾಧ್ಯಕ್ಷ ಪಿ.ಚನ್ನಬಸವನಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ತಹಶೀಲ್ದಾರ ಎಂ.ಕುಮಾರಸ್ವಾಮಿ ಮುಂತಾದ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.