ಜಗಳೂರು; ವಿವಿಧ ಗ್ರಾಮಸ್ಥರಿಂದ ದೂರು: ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಜಗಳೂರು, ಫೆ.21- ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದ ಗ್ರಾಮಸ್ಥರು ಸಮಸ್ಯೆ, ಬೇಡಿಕೆ ಮತ್ತು ದೂರುಗಳನ್ನು ಸಲ್ಲಿಸಿ ಕ್ರಮಕ್ಕಾಗಿ ಮನವಿ ಮಾಡಿಕೊಂಡರು.
ತಾಲ್ಲೂಕಿನ ಮುಷ್ಟಿಗರಹಳ್ಳಿ ಗ್ರಾಮದ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಮತ್ತು ಮರಳನ್ನು ಸಾಗಾಟ ಮಾಡುತ್ತಿದ್ದು ಈ ಬಗ್ಗೆ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ಮಂಜಪ್ಪ ಮತ್ತು ಇತರರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.
ರಾತ್ರಿ ವೇಳೆ ಬೃಹತ್ ಲಾರಿಗಳಲ್ಲಿ ಕೆರೆಯ ಮಣ್ಣು ಮತ್ತು ಮರಳನ್ನು ಸಾಗಾಟ ಮಾಡಲಾಗುತ್ತಿದ್ದರೂ ಕೂಡ ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅವರು ದೂರಿದರು.
ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ತಾ.ಪಂ ಇಒ ಚಂದ್ರಶೇಖರ್ ಮತ್ತು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು. ಪಟ್ಟಣದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಬಹುದಿನದ ಬೇಡಿಕೆಯಾದ ನಿವೇಶನ ನೀಡುವ ಕುರಿತು ಮನವಿ ಮಾಡಿದ ಜನಾಂಗದ ಮುಖಂಡರು ಎಲ್ಲಿಯಾದರೂ ನಿವೇಶನ ನೀಡಿ ಸಮಸ್ಯೆಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು.
ರಾಮಾಲಯ ರಸ್ತೆಯಲ್ಲಿ ಉಂಟಾಗಿರುವ ಟ್ರಾಫಿಕ್ ಜಾಮ್, ಅನವಶ್ಯಕ ವಾಹನಗಳ ನಿಲುಗಡೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಈ ಭಾಗದ ಸಾರ್ವಜನಿಕರು ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ತಹಶೀಲ್ದಾರ್ ಕಚೇರಿಯಲ್ಲಿ ವಿದ್ಯುನ್ಮಾನ ಮತ ಯಂತ್ರ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾ ಗಿತ್ತು. ವಿವಿಪ್ಯಾಟ್ ಕಾರ್ಯವೈಖರಿ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಇವಿಎಂ ಬಳಕೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ನಂತರ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಮತಯಂತ್ರ ರವಾನೆ ಹಾಗೂ ಸಂಗ್ರಹಣಾ ಕೇಂದ್ರವನ್ನು ಪರಿವೀಕ್ಷಿಸಿ ಚುನಾವಣೆ ಸಂದರ್ಭದಲ್ಲಿ ಅಗತ್ಯ ಮೂಲಸೌಕರ್ಯ, ಮತ ಯಂತ್ರಗಳ ಭದ್ರತೆ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ್ ಮೂರ್ತಿ, ತಾ.ಪಂ ಇಓ ಚಂದ್ರಶೇಖರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.