ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ದಾವಣಗೆರೆ, ಮಾ. 7- ಜಿಲ್ಲೆಯಲ್ಲಿ ನಾಡಿದ್ದು ದಿನಾಂಕ 9 ರಿಂದ 29 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ 31 ಪರೀಕ್ಷಾ ಕೇಂದ್ರಗಳಲ್ಲಿ  ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಹಿನ್ನೆಲೆಯಲ್ಲಿ ಪರೀಕ್ಷಾ ದಿನಗಳಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್‍ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಆದೇಶ ಹೊರಡಿಸಿದ್ದಾರೆ.

ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ, ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಬಿಡಲು ಬರುವ ಪೋಷಕರು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳ ಪಾರ್ಕಿಂಗ್ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ವಿವರಿಸಿದ್ದಾರೆ. 

error: Content is protected !!