ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಗಳಿಂದ ಪ್ರಚಾರ ಶುರು

ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಗಳಿಂದ ಪ್ರಚಾರ ಶುರು

ದಾವಣಗೆರೆ, ಏ.3-  ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ದಾವಣಗೆರೆ ದಕ್ಷಿಣ ಹಾಗೂ ಉತ್ತರ  ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸೋಮವಾರ ಚುನಾವಣಾ ಪ್ರಚಾರ ಆರಂಭಿಸಿದರು.

ಸಮೀಪದ ಆನೆಕೊಂಡದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಶಾಮನೂರು ಶಿವಶಂಕರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಶಿವಶಂಕರಪ್ಪನವರು ಅವರ ಪುತ್ರ  ಮಲ್ಲಿಕಾರ್ಜುನ್, ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಆನೆಕೊಂಡದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಆಗಮಿಸಿ,  ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಶ್ರೀ ಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಂಡರು.

ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರೆ, ಡೊಳ್ಳು ಕುಣಿತ ತಂಡವು ಪ್ರಚಾರದ ಮೆರವಣಿಗೆಗೆ ವಿಶೇಷ ಮೆರಗು ನೀಡಿದರು. ಶಾಮನೂರು ಶಿವಶಂಕರಪ್ಪ ಅವರು ವಾಹನದಲ್ಲಿ ಪಕ್ಷದ ಕಾರ್ಯಕರ್ತ ರೊಂದಿಗೆ ಕುಳಿತು ಮತ ಯಾಚಿಸಿದರು.

ನಂತರ ಪುತ್ರ ಎಸ್ಸೆಸ್ಸೆಂ ಪತ್ನಿಯೊಂದಿಗೆ ಶಾಮನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಈಶ್ವರ ದೇಗುಲದಲ್ಲಿ  ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರ ಆರಂಭಿಸಿದರು.

ಇದಕ್ಕೂ ಮುನ್ನ ಎಸ್ಸೆಸ್ಸೆಂ ಅವರು ಶಾಮನೂರಿಗೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜಮಾಯಿಸಿ ಜೈಕಾರ ಹಾಕಿದರು. ಕಾರ್ಯಕರ್ತರು ಪಟಾಕಿ ಸಿಡಿಸಿದರು. ಮಲ್ಲಿಕಾರ್ಜುನ್ ಅವರು ದೇವಸ್ಥಾನಕ್ಕೆ ಬರುತ್ತಿದ್ದಂತೆ ನೂಕು ನುಗ್ಗಲು ಉಂಟಾಯಿತು. ಕೆಲವರು ಅವರಿಗೆ ಹೂವಿನ ಹಾರ ಹಾಕುವ ಮೂಲಕ ಬರಮಾಡಿಕೊಂಡರು.

error: Content is protected !!