ದಾವಣಗೆರೆ, ಸೆ.26- ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆ ಹಿಂಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಗಾಂಧಿ ಭವನದ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾತನಾಡಿದ ಅವರು, ನಿರ್ಮಿತಿ ಕೇಂದ್ರದವರು ಗಾಂಧಿ ಭವನ ನಿರ್ಮಾಣದ ಕಾಮಗಾರಿ ಹೊಣೆ ವಹಿಸಿಕೊಂಡಿದ್ದು, ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ನಡೆಸಬೇಕು. ಅಲ್ಲದೆ ಆದಷ್ಟು ಶೀಘ್ರ ಗಾಂಧಿ ಭವನದ ಉದ್ಘಾಟನೆ ನೆರವೇರಿಸಲು ಅನುವಾಗುವಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್ ಕುಮಾರ್, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ರವಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.