ಹೊನ್ನಾಳಿ, ಮೇ 30- ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಕಳಪೆ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸಲಾಗುವುದು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಲಾಖಾವಾರು ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಈಗಾಗಲೇ ನಡೆದಿರುವ ಕಾಮಗಾರಿಗಳ ಗುಣಮಟ್ಟ ಕಳಪೆ ಯಾಗಿರುವುದು ಕಂಡು ಬಂದಿದ್ದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಯಾವ ಯಾವ ಕಾಮಗಾರಿಗಳು ಮುಗಿದಿವೆ. ಯಾವ ಕಾಮಗಾರಿಗಳು ಅಪೂರ್ಣಗೊಂಡಿವೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆಯುತ್ತಿದ್ದೇನೆ ಎಂದು ವಿವರಿಸಿದರು. ಚುನಾವಣೆ ಹತ್ತಿರ ಬರುತ್ತಿದ್ದಂತೆ ವಿವಿಧ ಇಲಾಖೆಗಳ ಸಾಕಷ್ಟು ಕಾಮಗಾರಿಗಳನ್ನು ಬೇಗನೆ ಮುಗಿಸಬೇಕೆಂಬ ಒತ್ತಡದಿಂದ ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿರುವುದು ಗಮನಕ್ಕೆ ಬಂದಿದ್ದು ಇಂತಹ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಈಗಾಗಲೇ ಅಪೂರ್ಣಗೊಂಡಿರುವ ಕಾಮಗಾರಿಗಳ ವಿವರಗಳನ್ನು ಪಡೆದ ಶಾಸಕರು ಯಾವುದೇ ಲೋಪ-ದೋಷವಿಲ್ಲದೇ ಕೆಲಸ ನಿರ್ವಹಿಸಬೇಕೆಂದು ಎಚ್ಚರಿಸಿದರು.
ಈ ಹಿಂದೆ ನಾನು ಶಾಸಕನಾಗಿದ್ದಾಗ ನಡೆದ ಎಲ್ಲಾ ಕಾಮಗಾರಿಗಳು ಗುಣಮಟ್ಟದಿಂದ ಕೂಡಿದ್ದವು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯತ್ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.