ಜನರು ಬಯಸಿರುವ ಬದಲಾವಣೆಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ದಾವಣಗೆರೆ, ಜೂ.5 – ಜನ ಬದಲಾವಣೆ ಬಯಸಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ, ಅವರ ಮೇಲೆ ಯಾರದೂ ಮುಲಾಜಿ ಲ್ಲದೇ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರೇ ಮಾಲೀಕರಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಅಧಿಕಾರಿಗಳು ಜನಪ್ರತಿನಿಧಿಗಳ ಜೊತೆ ಉತ್ತಮವಾದ ಸಂಬಂಧ ಇಟ್ಟುಕೊಳ್ಳಬೇಕು. ಅವರು ಪ್ರತಿನಿಧಿ, ಅಧಿಕಾರಿಗಳು ಜನ ಸೇವಕರು, ಜನರ ಕಷ್ಟ, ಸುಖಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ಆದರೆ ವಿಳಂಬ ಮಾಡಬಾರದು. ವಿಳಂಬ ಮಾಡುವುದು ಸಹ ಒಂದು ರೀತಿಯ ಭ್ರಷ್ಟಾಚಾರ ಮಾಡಿದಂತೆ ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಜನಸ್ನೇಹಿ ಆಡಳಿತ ಇರ ಬೇಕು. ಜನರು ಕಚೇರಿಗಳಿಗೆ ಬಂದಾಗ ಗೌರವಯು ತವಾಗಿ ನಡೆದುಕೊಂಡು, ಕಷ್ಟಗಳಿಗೆ ಪರಿಹಾರ ಮಾಡುವುದಲ್ಲದೇ ಜನರ ಜೊತೆ ಸೌಜನ್ಯ ಯುತವಾಗಿ ನಡೆದುಕೊಳ್ಳಬೇಕು ಎಂದರು.
ಅಧಿಕಾರಿಗಳ ಕ್ಷೇತ್ರ ಭೇಟಿಗೆ ಸೂಚನೆ: ಜಿಲ್ಲಾಧಿಕಾರಿ ತಹಶೀಲ್ದಾರರ ಕಚೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡ ಬೇಕು. ಇದರಿಂದ ಕೆಳಗಿನ ಅಧಿಕಾರಿಗಳು ಜಾಗೃತ ರಾಗುವರು. ಅಧಿಕಾರಿಗಳು ತಮ್ಮ ಜವಾಬ್ದಾರಿ, ಕರ್ತವ್ಯವನ್ನು ಸಮಾಜದ ಅಭಿವೃದ್ದಿಗಾಗಿ ಮಾಡಬೇಕು. ಮೇಲಾಧಿಕಾರಿಗಳು ಪದೇ ಪದೇ ಭೇಟಿ ನೀಡಿ ಕೆಲಸ ಕಾರ್ಯಗಳ ಪರಿಶೀಲನೆ, ಉಸ್ತುವಾರಿ ಮಾಡಲಿಲ್ಲವೆಂದರೆ ಭ್ರಷ್ಟಾಚಾರ ಕಡಿಮೆಯಾಗುವುದಿಲ್ಲ. ಜಿಲ್ಲಾ ಮಟ್ಟದ ಆಡಳಿತ ಸದಾ ಪಾರದರ್ಶಕವಾಗಿರಬೇಕು ಎಂದರು.
ಹೈರಾಣಾದ ಅಧಿಕಾರಿಗಳು
ಮುಖ್ಯಮಂತ್ರಿಗಳ ಸಭೆ 12.30ಕ್ಕೆ ನಿಗದಿ ಯಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ವೇಳೆಗೆ ಸರಿಯಾಗಿ ಆಗಮಿಸಿ ದ್ದರು. ದಾವಣಗೆರೆ ಹೆಲಿಪ್ಯಾಡ್ಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರು, ಮದುವೆ ಕಾರ್ಯಕ್ರಮ ವೊಂದಕ್ಕೆ ತೆರಳಿದರು. ಅಲ್ಲಿಂದ ಸಭೆಗೆ ಬರುತ್ತಾರೆಂಬ ಅಧಿಕಾರಿಗಳ ನಿರೀಕ್ಷೆ ಹುಸಿಯಾ ಯಿತು. ಅವರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಭೋಜನ ಮುಗಿಸಿಕೊಂಡು ಆಗಮಿಸುವಷ್ಟರಲ್ಲಿ ಅಧಿಕಾರಿಗಳು ಹೈರಾಣಾಗಿದ್ದರು.
ಸ್ಮಾರ್ಟ್ ಸಿಟಿ ಕಾಮಗಾರಿ ಹಣ ಪಾವತಿ ತಡೆಯಿರಿ: ಎಸ್ಸೆಸ್ಸೆಂ
ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು, ಕೆಲವು ಕಡೆ ಅವೈಜ್ಞಾನಿಕವಾಗಿ ಮತ್ತು ಗುಣಮಟ್ಟದ ಕೊರತೆಯುಳ್ಳ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಕಾಮಗಾರಿಗಳನ್ನು ಪರಿಶೀಲಿಸುವವರೆಗೂ ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ತಡೆಹಿಡಿಯುವಂತೆ ಜಿಲ್ಲಾ ಉಸ್ತುವಾರಿ ಸಚಿವರೂ, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರೂ ಆದ ಎಸ್.ಎಸ್.ಮಲ್ಲಿಕಾರ್ಜುನ್ ಸೂಚಿಸಿದರು.
ಕೊಡಗನೂರು ಕೆರೆ ಕಳೆದ ಮುಂಗಾರಿನಲ್ಲಿ ಏರಿ ಕುಸಿದಿದ್ದು ಮೂರು ಬಾರಿ ಇದೇ ರೀತಿಯಾಗಿದೆ. ಆದರೆ ರಿಪೇರಿಗೆಂದು ಕೋಟ್ಯಾಂತರ ರೂ.ಗಳನ್ನು ವ್ಯಯ ಮಾಡಿದ್ದರೂ ಗುಣಮಟ್ಟದ ಕಾಮಗಾರಿ ಮಾಡಿಲ್ಲ, ಕೂಲಂಕುಶವಾಗಿ ಪರಿಶೀಲಿಸಲು ಜಿಲ್ಲಾಧಿಕಾರಿಗೆ ತಿಳಿಸಿದರು.
ಮಾಯಕೊಂಡ ಕ್ಷೇತ್ರದ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಇಂದಿರಾ ಕ್ಯಾಂಟಿನ್ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಇಎಸ್ಐ, ಪಿ.ಎಫ್ ಪಾವತಿಸಿಲ್ಲ, ಸಂಬಂಧಿಸಿದ ಏಜೆನ್ಸಿಯವರು ಪಾವತಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.
ಹೊನ್ನಾಳಿ ಶಾಸಕರಾದ ಜಿ.ಡಿ.ಶಾಂತನಗೌಡ, ಹೊನ್ನಾಳಿಯಲ್ಲಿ ಇಂದಿರಾ ಕ್ಯಾಂಟಿನ್ ಆರಂಭವಾಗಿಲ್ಲ, ಆರಂಭಿಸಲು ಕ್ರಮ ಕೈಗೊಳ್ಳಲು ಮತ್ತು ನೆರೆ ಹಾವಳಿಯಿಂದ ಮನೆ ಬಿದ್ದವರನ್ನು ಸರಿಯಾಗಿ ಗುರುತಿಸದೇ ಕೈಬಿಡಲಾಗಿದ್ದು ಪರಿಶೀಲಿಸಿ ಪರಿಹಾರ ಒದಗಿಸಲು ಮನವಿ ಮಾಡಿದರು.
ಎಸ್ಪಿ ಮೇಲೆ ಸಿಎಂ ಗರಂ
ಸಭೆಯ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಏಳುವ ಮುನ್ನವೇ ಎದ್ದ ಎಸ್ಪಿ ಅರುಣ್ ಅವರಿಗೆ ಸಿದ್ದರಾಮಯ್ಯ `ಏ ಕೂತುಕೊಳ್ರೀ’ ಎಂದರು. ನಂತರ ನೀವು ಎಸ್ಪಿನಾ ? ಎಂದು ಕೇಳಿದರು.
ಮುಂದುವರಿದ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ರಕ್ಷಣಾಧಿಕಾರಿಯವರು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಆದರೆ ಯಾವುದೇ ನೈತಿಕ ಪೊಲೀಸ್ಗಿರಿಗೆ ಅವಕಾಶ ಇರಬಾರದು ಎಂದರು.
ದಾವಣಗೆರೆ ಜಿಲ್ಲೆ ಇನ್ನಷ್ಟು ಪ್ರಗತಿ
ದಾವಣಗೆರೆ ಜಿಲ್ಲೆ ಬಹಳ ಪ್ರಗತಿ ಪರವಾದ ಜಿಲ್ಲೆಯಾಗಿದ್ದು, ಇನ್ನಷ್ಟು ಪ್ರಗತಿ ಕಾಣಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ಅಭಿವೃದ್ದಿಯಲ್ಲಿ ವಿವಿಧ ಇಲಾಖೆಗಳ ಪಾತ್ರ ಬಹಳ ಪ್ರಮುಖವಾಗಿದೆ. ತಹಶೀಲ್ದಾರರ ಕಚೇರಿ ಜನರಿಗೆ ಹೆಚ್ಚು ಸೇವೆ ಕೊಡುವ ಕಚೇರಿಯಾಗಿದ್ದು ಇಲ್ಲಿ ಲಂಚಗುಳಿತನ, ಅಲೆದಾಡಿಸುವುದು ಹೆಚ್ಚಿದೆ ಎಂಬ ದೂರುಗಳಿವೆ, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
ತಹಶೀಲ್ದಾರ್ ಕಚೇರಿ, ಪೊಲೀಸ್ ಸ್ಟೇಷನ್, ತಾಲ್ಲೂಕು ಪಂಚಾಯತ್, ಕೃಷಿ, ರೇಷ್ಮೆ, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಇಲಾಖೆಗಳು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಭಿವೃದ್ಧಿ ಕುರಿತು ಮಲ್ಲಿಕಾರ್ಜುನ್ ಜೊತೆ ಚರ್ಚಿಸಿ ಸಿಎಂ ಶಾಸಕರಿಗೆ ಸಲಹೆ
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲಾ ಮಂತ್ರಿಯಾಗುತ್ತಾರೆ. ಅವರು ಸುದೀರ್ಘವಾಗಿ ಕೆಡಿಪಿ ಸಭೆಗಳನ್ನು ನಡೆಸಲಿದ್ದಾರೆ. ಈ ವೇಳೆ ಜಿಲ್ಲೆಯ ಶಾಸಕರುಗಳು ಚರ್ಚಿಸಿ, ಜಿಲ್ಲೆಯಲ್ಲಿ ಈ ಹಿಂದೆ ಏನಾಗಿತ್ತು, ಮುಂದೆ ಏನಾಗಬೇಕೆಂದು ಜಿಲ್ಲೆಯ ಅಭಿವೃದ್ದಿ ಕುರಿತು ಚರ್ಚೆ ಮಾಡಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
ಗೋಹತ್ಯೆ ಕಾಯ್ದೆ ವಾಪಾಸ್: ಕ್ಯಾಬಿನೆಟ್ನಲ್ಲಿ ಚರ್ಚಿಸಿ ತೀರ್ಮಾನ
ದಾವಣಗೆರೆ, ಜೂ. 5- ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು, ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಸಭೆ ಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು, ಬಜೆಟ್ ಮಂಡನೆಯನ್ನು ಜುಲೈ 7 ರ ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಗೋಹತ್ಯೆ ಕಾಯ್ದೆ ವಾಪಾಸ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕ್ಯಾಬಿನೆಟ್ನಲ್ಲಿ ಚರ್ಚಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು.
ನಾವು ವಿದ್ಯುತ್ ದರ ಏರಿಕೆ ಮಾಡಿಲ್ಲ. ವಿದ್ಯುತ್ ಆರ್.ಸಿ.ಇ. ಅವರು ದರ ಏರಿಸಿದ್ದಾರೆ. ನಾವು ಅಧಿಕಾರಕ್ಕೆ ಬರುವ ಮುನ್ನವೇ ರೆಗ್ಯುಲೇಟರ್ ಆಕ್ಟ್ ಪ್ರಕಾರ ಅವರು ದರ ಪರಿಷ್ಕರಿಸಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಿ.ಪಂ. ಸಭಾಂಗಣ ಸ್ವಚ್ಛ, ಸುಂದರ
ಕಳೆದ ಕೆಲ ವರ್ಷಗಳಿಂದ ಸಭೆಗಳಿಲ್ಲದ ಧೂಳು ಹಿಡಿದಿದ್ದ ಜಿಲ್ಲಾ ಪಂಚಾಯ್ತಿಯ ಎಸ್.ಎಸ್. ಮಲ್ಲಿಕಾರ್ಜುನ್ ಸಭಾಂಗಣ ಇಂದು ಮದುವಣಗಿತ್ತಿಯಂತೆ ಕಂಗೊಳಿಸುತ್ತಿತ್ತು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ದಾವಣಗೆರೆಗೆ ಆಗಮಿಸಿ, ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು. ಮುಖ್ಯಮಂತ್ರಿಗಳ ಸಭೆಯ ಹಿನ್ನೆಲೆಯಲ್ಲಿ ಸಭಾಂಗಣ ಹೊಸ ರೂಪ ಪಡೆದಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಮಾತನಾಡಲು ಪದೇ ಪದೇ ಕಿರಿ ಕಿರಿ ನೀಡುತ್ತಿದ್ದ ಮೈಕ್ಗಳ ಬದಲಾಗಿ ಹೊಸ ಮೈಕ್ಗಳನ್ನು ಅಳವಡಿಸಲಾಗಿತ್ತು. ಹೊಸ ಮ್ಯಾಟ್ಗಳನ್ನು ಹಾಕಲಾಗಿತ್ತು.
ದೂರುಗಳಿಗೆ ಪ್ರತಿಕ್ರಿಯಿಸಿ: ಪತ್ರಿಕೆಗಳು, ಟಿ.ವಿ.ಗಳಲ್ಲಿ ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು. ಅನೇಕ ಅಧಿಕಾರಿಗಳು ಕ್ಷೇತ್ರಗಳಿಗೆ ಹೋಗದೆ ಹವಾನಿಯಂತ್ರಿತ ಕೊಠಡಿಗಳಲ್ಲಿ ಕೂತು ಹೋಗುತ್ತಾರೆ. ಸರ್ಕಾರ ವಾಹನ ಸೇರಿದಂತೆ ಎಲ್ಲಾ ಸೌಲಭ್ಯ ನೀಡಿದ್ದು ಐಷಾರಾಮಿ ಜೀವನ ಮಾಡಲಿ ಎಂದಲ್ಲ, ಜನರ ಕೆಲಸ ಮಾಡಲಿ ಎಂದು, ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳದೇ ಜನರ ಕೆಲಸ ಮಾಡಬೇಕೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದರು.
ಪೂರ್ವ ಮುಂಗಾರು ನಷ್ಟ ಪರಿಹಾರ: ಪೂರ್ವ ಮುಂಗಾರಿನಲ್ಲಿ ಬಿದ್ದ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಬೆಳೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗುತ್ತದೆ ಎಂದರು.
ಜೂನ್ 9 ರಿಂದ ಮುಂಗಾರು ಪ್ರವೇಶ: ಇದೇ ಜೂನ್ 9 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶಿಸುವ ಮುನ್ಸೂಚನೆ ಇದ್ದು ಕೃಷಿ ಚಟುವಟಿಕೆಗಳು ಹೆಚ್ಚಾಗಲಿವೆ. ಈ ವೇಳೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜಂಟಿ ಕೃಷಿ ನಿರ್ದೇಶಕರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಬಿತ್ತನೆ ಬೀಜ, ರಸಗೊಬ್ಬರ, ರಾಸಾಯನಿಕಗಳ ದಾಸ್ತಾನಿನ ಬಗ್ಗೆ ನಿಗಾವಹಿಸಬೇಕು. ಇದೇ ವೇಳೆ ಪ್ರವಾಹ ತಡೆಗೂ ಪೂರ್ವ ಸಿದ್ದತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ಜಿಲ್ಲೆಯ ಅಂಕಿ-ಅಂಶಗಳ ಕುರಿತು ಸವಿವರವಾದ ಮಾಹಿತಿ ಪ್ರಸ್ತುತಪಡಿಸಿದರು. ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗ, ಜಗಳೂರು ಶಾಸಕ ಡಿ.ದೇವೇಂದ್ರಪ್ಪ, ಹರಿಹರ ಶಾಸಕ ಬಿ.ಪಿ.ಹರೀಶ್, ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಡಾ. ಅರುಣ್.ಕೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.