ಜನರ ಸಮಸ್ಯೆ ಪರಿಹಾರಕ್ಕೆ ಆದ್ಯತೆ

ಜನರ ಸಮಸ್ಯೆ ಪರಿಹಾರಕ್ಕೆ ಆದ್ಯತೆ

ನೂತನ ಜಿಲ್ಲಾಧಿಕಾರಿ ಡಾ. ಕೆ.ವಿ.ವೆಂಕಟೇಶ್

ರಾಜ್ಯ ಸರ್ಕಾರದ  ಐದೂ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತ್ವರಿತ ಸಮಯದಲ್ಲಿ ತಲುಪಿಸಲು ಒತ್ತು 

ದಾವಣಗೆರೆ, ಜು. 26- ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲಾಡಳಿತ  ನಡೆಸಲಾಗುವುದು. ಜನರ ಯಾವುದೇ ಸಮಸ್ಯೆಗೆ ಪ್ರಥಮ ಆದ್ಯತೆ ನೀಡಿ ಸ್ಪಂದಿಸಲಾಗುವುದು ಎಂದು  ಜಿಲ್ಲಾಧಿಕಾರಿ ಡಾ.ಕೆ.ವಿ.ವೆಂಕಟೇಶ್ ಹೇಳಿದ್ದಾರೆ.

ನೂತನ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಹಿರಿಯ ಶಾಸಕ  ಡಾ.ಶಾಮನೂರು ಶಿವಶಂಕರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ ಅವರ ಸಹಕಾರ ಪಡೆದು ಅಭಿವೃದ್ಧಿ ಸೂಚ್ಯಂಕದಲ್ಲಿ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮೊದಲ ಸ್ಥಾನಕ್ಕೆ ತರಲು ಶ್ರಮಿಸಲಾಗುವುದು ಎಂದು ಹೇಳಿದರು.

ಆಡಳಿತ ಯಂತ್ರಕ್ಕೆ ಚುರುಕು ನೀಡಿ, ಸರ್ಕಾರದಿಂದ ಆಗಬೇಕಾದ ಎಲ್ಲಾ ಕೆಲಸ, ಕಾರ್ಯಗಳಿಗೆ ಮುತುವರ್ಜಿವಹಿಸಲಾಗುವುದು. ರೈತರ ಸಮಸ್ಯೆ, ಮಹಿಳೆಯರ ಸಮಸ್ಯೆ, ಬಡವರ ಸಮಸ್ಯೆಗಳನ್ನು ಪರಿಹರಿಸಲು ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಸರ್ಕಾರದ ಯೋಜನೆಗಳನ್ನು ತಲುಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದ  ಐದೂ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತ್ವರಿತ ಸಮಯದಲ್ಲಿ ತಲುಪಿಸಲು ಒತ್ತು ನೀಡಲಾಗುವುದು. ಸಾರ್ವಜನಿಕರು ಕೆಲಸ, ಕಾರ್ಯಗಳಿಗೆ ವಿನಾಕಾರಣ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಜಿಲ್ಲಾಡಳಿತ ಭವನದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರಿಂದ  ಡಾ.ಎಂ.ವಿ.ವೆಂಕಟೇಶ್ ಅಧಿಕಾರ ಸ್ವೀಕರಿಸಿದರು.

error: Content is protected !!