ಹಿಂದುಳಿದ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ

ಹಿಂದುಳಿದ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ

ಬಾಲಕಿಯರ ಹಾಸ್ಟೆಲ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಎಸ್ಸೆಸ್ಸೆಂ

ದಾವಣಗೆರೆ, ಅ.14- ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚು ಬೇಡಿಕೆಯಿದ್ದು, ನಗರದ ನಾನಾ ಕಡೆ ಸೂಕ್ತ ಜಾಗ ಗುರುತಿಸಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು.
ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕುಂದುವಾಡ ರಸ್ತೆಯ ಸಪ್ತಗಿರಿ ಶಾಲೆಯ ಪಕ್ಕದಲ್ಲಿ ಜರುಗಿದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಗರದಲ್ಲಿ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡವು ರೂ.3.26 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿದ್ದು, ಗುಣಮಟ್ಟದ ಕಾಮಗಾರಿ ಹಾಗೂ ವ್ಯವಸ್ಥಿತ ಕೊಠಡಿಗಳನ್ನು ಹೊಂದಿರಬೇಕು ಹಾಗೂ ನಿಗದಿತ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡು, ವಿದ್ಯಾರ್ಥಿನಿಯರ ಅನುಕೂಲಕ್ಕೆ ಲಭ್ಯವಾಗಬೇಕು ಎಂದರು.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಅಧಿಕಾರಿಗಳು ಪ್ರತಿಯೊಬ್ಬರಿಗೂ ಹಾಸ್ಟೆಲ್ ವ್ಯವಸ್ಥೆ ಮಾಡಿಕೊಡಬೇಕು ಹಾಗೂ ನೂತನ ಕಟ್ಟಡವನ್ನು ಅತ್ಯಂತ ವ್ಯವಸ್ಥಿತವಾಗಿ ನಿರ್ಮಾಣ ಮಾಡಬೇಕು. ವಿದ್ಯಾರ್ಥಿನಿಯರು ಹಾಸ್ಟೆಲ್ ಸೌಲಭ್ಯದ ಜೊತೆಗೆ ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಬೇಕೆಂದರು.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಒಡೆತನದ ಜಾಗ ಕಡಿಮೆ ಇದ್ದು, ಖಾಸಗಿಯಾಗಿ ಖರೀದಿಸಿ, ವಿದ್ಯಾರ್ಥಿ ನಿಲಯವನ್ನು ನಿರ್ಮಾಣ ಮಾಡಲಾಗುವುದು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಾಯತ್ರಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪುಷ್ಪಾ ಎಸ್. ಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುದೀಪ್ ಪಿ. ಬನಾರೆ, ಸಹಾಯಕ ಇಂಜಿನಿ ಯರ್ ಪ್ರಿಯಾ ಕೆ. ಎ, ಮುಖಂಡರುಗಳಾದ ಮಾರುತಿ ಕುಂದವಾಡ, ಮೇಕಾ ಮುರುಳಿಕೃಷ್ಣ, ರಾಮಮೂರ್ತಿ, ಕುಂದವಾಡ ಮಂಜುನಾಥ್, ಎಸ್.ಎನ್. ಬಸವರಾಜ್, ಕಂಚಿಕೇರಿ ಮಹೇಶ್, ಅಂಜಿಬಾಬು, ಜೆ.ಸಿ.ಬಿ.ಹನುಮಂತಪ್ಪ, ರವಿಸ್ವಾಮಿ, ದಯಾನಂದ ಹಾಗೂ ಬಿಸಿಎಂ ಇಲಾಖೆಯ ವಾರ್ಡನ್‍ಗಳು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

error: Content is protected !!