ಜಗಳೂರಿನಲ್ಲಿ ಸಚಿವ ಎಸ್ಸೆಸ್ಸೆಂ ಅವರಿಗೆ ಅದ್ದೂರಿ ಸ್ವಾಗತ
ಜಗಳೂರು, ನ.21- ನಂಜುಂಡಪ್ಪ ವರದಿ ಅನ್ವಯ ಜಗಳೂರು ಕ್ಷೇತ್ರ ಅತಿ ಹಿಂದುಳಿದ ಕ್ಷೇತ್ರವಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ ತಿಳಿಸಿದರು.
ಸಚಿವರಾದ ನಂತರ ಇದೇ ಮೊದಲ ಬಾರಿಗೆ ಜಗಳೂರಿಗೆ ಆಗಮಿಸಿದ ಮಲ್ಲಿಕಾರ್ಜುನ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ವೃತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು.
ನಂತರ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಹಿಂದುಳಿದ ತಾಲ್ಲೂಕನ್ನು
ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಚಿವನಾಗಿ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.
ಬರದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪಟ್ಟಣದಲ್ಲಿ ಯುಜಿಡಿ ಸಂಪರ್ಕ ಕಲ್ಪಿಸಲು ಮತ್ತು ಪಟ್ಟಣದ ಕೆರೆ ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಸಚಿವರು ತಿಳಿಸಿದರು.
ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ, ಸಚಿವ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕರು ಕರೆ ನೀಡಿದರು.
ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ, ಕೆಪಿಸಿಸಿ ಸದಸ್ಯ ಕಲ್ಲೇಶ್ರಾಜ್ ಪಟೇಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಷೀರ್ ಅಹಮದ್, ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಲ್ಲಘಟ್ಟಿ ಶೇಖರಪ್ಪ, ಮುಖಂಡರಾದ ಸುರೇಶ್ ಗೌಡ, ತಿಮ್ಮಾರೆಡ್ಡಿ, ಶಿವನಗೌಡ ಮುಂತಾದವರು ಉಪಸ್ಥಿತರಿದ್ದರು.