ದಾವಣಗೆರೆ, ಡಿ17- ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದಿರುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಹೆಚ್ಚುತ್ತಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಜಿಲ್ಲಾ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪಕ್ಷದ ಪ್ರಮುಖರು, ಕಾರ್ಯಕರ್ತರು, ಕಾಂಗ್ರೆಸ್ ಆಡಳಿತದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಬಳಿಕ ಜಯದೇವ ವೃತ್ತದಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹರಿಹರ ಶಾಸಕ ಬಿ.ಪಿ. ಹರೀಶ್, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿ ರುವ ಸಂದರ್ಭದಲ್ಲಿ ಅದೇ ಜಿಲ್ಲೆಯಲ್ಲಿ ಮಹಿಳೆಯೋ ರ್ವಳನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆಯಿತು. ಈ ಘಟನೆಯಿಂದ ಇಡೀ ಸಮಾಜವೇ ತಲೆಗ್ಗಿಸುವಂತಾಗಿದೆ. ಇನ್ನು ವ್ಯಾಪಕವಾಗಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯತೆ ಎತ್ತಿ ತೋರಿಸುತ್ತದೆ ಎಂದರು.
ಆದಾಯ ಮೀರಿ ಆಸ್ತಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲೆ ಹಾಕಿದ್ದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿರುವುದು ಖಂಡನೀಯ. ಈ ಕೃತ್ಯದ ಮೂಲಕ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ತನ್ನ ಸಹಕಾರ ಇರುವುದನ್ನು ಸಾಬೀತುಪಡಿಸಿದೆ. ಕಾಂಗ್ರೆಸ್ ಸರ್ಕಾರ ತಾನು ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನೂ ಸಹ ಸರಿಯಾಗಿ ಜಾರಿಗೊಳಿಸದೆ ಜನರ ದಿಕ್ಕು ತಪ್ಪಿಸುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟಗಳಲ್ಲಿಯೂ ಹೋರಾಟ ನಡೆಸಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ವಿ.ಪ. ಮಾಜಿ ಮುಖ್ಯಸಚೇತಕ ಡಾ. ಶಿವಯೋಗಿಸ್ವಾಮಿ, ದೂಡಾ ಮಾಜಿ ಅಧ್ಯಕ್ಷ ಕೆ.ಎಂ. ಸುರೇಶ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ್, ಸದಸ್ಯ ಕೆ.ಎಂ. ವೀರೇಶ್, ಎಸ್.ಟಿ. ವೀರೇಶ್, ಮುಖಂಡರುಗಳಾದ ಬಿ.ಎಸ್. ಜಗದೀಶ್, ಶ್ರೀನಿವಾಸ ದಾಸಕರಿಯಪ್ಪ, ಮಂಜಳಾ ಮಹೇಶ್, ಭಾಗ್ಯ ಪಿಸಾಳೆ, ಎಚ್.ಪಿ. ವಿಶ್ವಾಸ್ ಇನ್ನಿತರರು ಪ್ರತಿಭಟನೆಯಲ್ಲಿದ್ದರು.