ಮಹಾಧಿವೇಶನದಲ್ಲಿ ವೀರಶೈವ-ಲಿಂಗಾಯತ ಶಕ್ತಿ ಪ್ರದರ್ಶನ

ಮಹಾಧಿವೇಶನದಲ್ಲಿ ವೀರಶೈವ-ಲಿಂಗಾಯತ ಶಕ್ತಿ ಪ್ರದರ್ಶನ

ದಾವಣಗೆರೆ, ಡಿ.18 – ಇದೇ ದಿನಾಂಕ 23 ಹಾಗೂ 24ರಂದು   ನಗರದಲ್ಲಿ ಏರ್ಪಾಡಾಗಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧಿವೇಶನದಲ್ಲಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆಗಿರುವ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ಇಂದಿಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಂಬಿಎ ಮೈದಾನದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಕ್ಷಕ್ಕೂ ಅಧಿಕ ಖುರ್ಚಿಗಳನ್ನು ಹಾಕಲಾಗಿದೆ. ಊಟ, ವಸತಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿ ಕೊಳ್ಳಲಾಗುತ್ತಿದೆ ಎಂದರು.

ಸುಮಾರು ಎರಡರಿಂದ ಮೂರು ಲಕ್ಷಕ್ಕೂ ಹೆಚ್ಚು ಅಧಿಕ ಜನರು ಅಧಿವೇಶನದಲ್ಲಿ ಸೇರುವ ನಿರೀಕ್ಷೆ ಇದೆ. ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್ ನೇತೃತ್ವದ ನಿಯೋಗವು ಅಧ್ಯಕ್ಷತೆ ವಹಿಸುವಂತೆ ಆಹ್ವಾನ ನೀಡಿದ್ದಾರೆ. ಸಂತೋಷದಿಂದ ಒಪ್ಪಿದ್ದೇನೆ ಎಂದು ತಿಳಿಸಿದರು.

ಉದ್ಘಾಟನಾ ಸಮಾರಂಭದ ವೇದಿಕೆಗೆ ಎಸ್.ನಿಜಲಿಂಗಪ್ಪ ಅವರ ಹೆಸರು ಇಡಲಾಗಿದೆ. ಇದೇ ದಿನಾಂಕ 23ರ ಶನಿವಾರ ಮಧ್ಯಾಹ್ನ 12.3ರಿಂದ 2.30ರವರೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ಸಿರಿಗೆರೆಯ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಶ್ರೀಸಿದ್ಧಗಂಗಾ ಸ್ವಾಮೀಜಿ, ಹುಬ್ಬಳ್ಳಿಯ ಮೂರು ಸಾವಿರ ಸಂಸ್ಥಾನ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಗದಗ ವೀರೇಶ್ವರ ಪುಣ್ಯಾಶ್ರಮದ ಡಾ. ಕಲ್ಲಯ್ಯಜ್ಜ, ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.

ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ 24ನೇ ಮಹಾಧಿವೇಶನ ಉದ್ಘಾಟಿಸಲಿದ್ದಾರೆ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಸಭಾದ ಗೌರವಾಧ್ಯಕ್ಷ ಡಾ.ಭೀಮಣ್ಣ ಖಂಡ್ರೆಗೆ ಗೌರವ ಸಮರ್ಪಣೆ ಮಾಡಲಾಗುವುದು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶ್ರೀಶಿವಕುಮಾರ ಮಹಾಮಂಟಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಎಸ್.ನಿಜಲಿಂಗಪ್ಪ ವೇದಿಕೆ, ಸಚಿವ ಎಂ.ಬಿ.ಪಾಟೀಲ್ ಅವರು ಜೆ.ಹೆಚ್.ಪಟೇಲ್ ವೇದಿಕೆಯ ಉದ್ಘಾಟನೆ ನೆರವೇರಿಸುವರು.

ಸಂಸದ ಜಿ.ಎಂ.ಸಿದ್ದೇಶ್ವರ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಡಿ.ಜಿ.ಶಾಂತನಗೌಡ, ಬಿ.ಪಿ.ಹರೀಶ್, ಬಿ.ಕೆ.ಸಂಗಮೇಶ್ವರ, ಬಸವರಾಜು ವಿ.ಶಿವಗಂಗಾ, ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್.ಎಸ್.ಗಣೇಶ್ ಆಗಮಿಸುವರು.

ಸಮಾರೋಪ ಸಮಾರಂಭವು ಡಿ.24ರಂದು ಮಧ್ಯಾಹ್ನ 3.30ಕ್ಕೆ ಎಸ್.ನಿಜಲಿಂಗಪ್ಪ ವೇದಿಕೆಯಲ್ಲಿ ನಡೆಯಲಿದ್ದು, ಸಾನಿಧ್ಯವನ್ನು ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿ ಕೇಂದ್ರದ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿ, ಸಾಣೇಹಳ್ಳಿ ಶ್ರೀಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಇದೇ ವೇಳೆ ಡಾ.ಎನ್.ತಿಪ್ಪಣ್ಣಗೆ ಗೌರವ ಸಮರ್ಪಣೆ ಮಾಡಲಾಗುವುದು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಡಾ.ಗೊ.ರು.ಚನ್ನಬಸಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ವಿವರಿಸಿದರು.

ಈ ವೇಳೆ ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್, ರಾಷ್ಟ್ರೀಯ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಉದ್ಯಮಿಗಳಾದ ಎಸ್.ಎಸ್.ಗಣೇಶ್, ಬಿ.ಸಿ. ಉಮಾಪತಿ, ಸುಷ್ಮಾ ಪಾಟೀಲ್, ಬಿ.ಜಿ. ರಮೇಶ್, ನವೀನ್ ಕೋಡಿಹಳ್ಳಿ, ಸಂದೀಪ್ ಸೇರಿದಂತೆ ಇತರರು ಇದ್ದರು.

error: Content is protected !!