ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಗೌರವಯುತ ವಾತಾವರಣ ಕಲ್ಪಿಸಿ

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಗೌರವಯುತ ವಾತಾವರಣ ಕಲ್ಪಿಸಿ

ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್‌

ದಾವಣಗೆರೆ, ಡಿ. 28 – ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಸುರಕ್ಷಿತ , ಭಯ ಮುಕ್ತ ಮತ್ತು ಗೌರವಯುತ ವಾತಾವರಣ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜರುಗಿದ ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆ ಕಾಯ್ದೆ-2013 ಕುರಿತ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ ತಡೆಯಲು ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜು, ಸಂಸ್ಥೆಗಳಲ್ಲಿ ಆಂತರಿಕ ಕಿರುಕುಳ ಸಮಿತಿ ರಚಿಸಲಾಗಿದೆ. ಮಹಿಳೆಯರು ತಮ್ಮ ಮೇಲಾಗುವ ದೌರ್ಜನ್ಯ ಹಾಗೂ ಕಿರುಕುಳವನ್ನು ಗೌಪ್ಯವಾಗಿಡದೆ ಮುಕ್ತವಾಗಿ ಆಂತರಿಕ ಕಿರುಕುಳ ಸಮಿತಿಗೆ ದೂರ ನೀಡಬಹುದು. ಇಲಾಖೆಗಳು ನೊಂದ ಮಹಿಳೆಯರ ಹೆಸರನ್ನು ಬಹಿರಂಗಪಡಿಸದೇ ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಬೇಕು ಎಂದರು.
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ದೌರ್ಜನ್ಯವೆಸಗುತ್ತಿರುವುದು ಈಗಲೂ ಕಂಡು ಬರುತ್ತಿದೆ. ಈ ಕಾಯ್ದೆಗನುಸಾರವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ ಮಾತನಾಡಿ, ಕೆಲಸದ ಸ್ಥಳಗಳಲ್ಲಿ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಸಹ ಉದ್ಯೋಗಿಗಳು ಯಾವುದೇ ಕಿರುಕುಳ ನೀಡಿದರೆ, ಆಂತರಿಕ ಸಮಿತಿಯ ಮೂಲಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್ ಅನಿತಾ ಮತ್ತಿತರರು ಉಪಸ್ಥಿತರಿದ್ದರು.

error: Content is protected !!