ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ

ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿ ಬಸವಣ್ಣ

ದಾವಣಗೆರೆ, ಜ. 18 –  ಕರ್ನಾಟಕದ  ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ ಅವರ ಹೆಸರನ್ನು ಘೋಷಣೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಇಂದಿನ ಕಲುಷಿತ ವಾತಾವರಣದಲ್ಲಿ ಬಸವಣ್ಣ ಅವರ ತತ್ವ ಆದರ್ಶ ಎಲ್ಲಡೆ ಪಸರಿಸಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.

ಮುಂದಿನ ವರ್ಷ ಅನುಭವ ಮಂಟಪದ ಲೋಕಾರ್ಪಣೆ ಮಾಡಲು ಸಭೆ ತೀರ್ಮಾನಿಸಿದ್ದು, ಮಂಟಪದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಿದೆ ಎಂದವರು ಇದೇ ಸಂದರ್ಭದಲ್ಲಿ ಹೇಳಿದರು.

ಸಂಪುಟ ಸಭೆ ಬಳಿಕ ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಇಂದು ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟುಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದವರು ಹೇಳಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನ ವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದಿರುವ ಸಿದ್ದರಾಮಯ್ಯ, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ.  ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಕೇಳಿಕೊಂಡಿದ್ದಾರೆ.

error: Content is protected !!