ದೇಶಕ್ಕೆ ಜಗಜೀವನ್ ರಾಂ ಕೊಡುಗೆ ಅಪಾರ

ದೇಶಕ್ಕೆ ಜಗಜೀವನ್ ರಾಂ ಕೊಡುಗೆ ಅಪಾರ

117ನೇ ಜಯಂತಿ ಕಾರ್ಯಕ್ರಮದಲ್ಲಿ  ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ 

ದಾವಣಗೆರೆ, ಏ. 5 – ದೇಶಕ್ಕೆ ಅಪಾರ ಕೊಡುಗೆ ನೀಡಿರುವ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಅವರ  ಆದರ್ಶವನ್ನು ನಾವೆಲ್ಲಾ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಹೇಳಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಇಂದು ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಂ ಅವರ 117ನೇ ಜಯಂತಿ  ಕಾರ್ಯಕ್ರಮ ದಲ್ಲಿ ಪಾಲ್ಗೊಂಡು  ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಜಗಜೀವನ್ ರಾಂ ಅವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪಪ್ರಧಾನಿಯೂ ಆಗಿದ್ದರು.  ಅಲ್ಲದೇ ಅಸ್ಪೃಶ್ಯತಾ ನಿವಾರಣೆ ಹೋರಾಟದ ಮಹಾನ್ ನಾಯಕರಾಗಿದ್ದರು.   50 ವರ್ಷಗಳ ಕಾಲ ದೇಶ ಸೇವೆ ಮಾಡಿದರು. 

1971ರಲ್ಲಿ ಪಾಕಿಸ್ತಾನದ ವಿರುದ್ದದ ಯುದ್ದದ ಸಮಯದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. 

ಭಾರತ-ಪಾಕಿಸ್ತಾನ ಯುದ್ದದಲ್ಲಿ ದಿಗ್ವಿಜಯ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

ಹಲವು ಇಲಾಖೆಗಳಲ್ಲಿ ಅವರದೇ ಆದ ಚಾಪು ಮೂಡಿಸಿದ್ದಾರೆ. ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾಗಿದ್ದು,  ಅವರ ಹಾದಿಯಲ್ಲಿ ನಾವೆಲ್ಲರೂ ಸಾಗಿ, ಶೋಷಿತ ವರ್ಗದ ಜನರಿಗೆ ಸಹಾಯ ಮಾಡಬೇಕಿದೆ. ಇವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆಯೋಣ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು.   

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ  ಕೆ.ನಾಗರಾಜ, ಬಿಸಿಎಂ ಅಧಿಕಾರಿ ಗಾಯತ್ರಿ, ಪರಿಶಿಷ್ಟ ವರ್ಗಗಳ ಅಧಿಕಾರಿ ಬೇಬಿ ಸುನೀತಾ, ದಲಿತ ಸಮಾಜ ಮುಖಂಡರು ಹಾಗೂ  ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!