ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ

ವಿಶೇಷ ಆರ್ಥಿಕ ವಲಯ ಸೃಜನೆಗೆ ಆದ್ಯತೆ

ಚನ್ನಗಿರಿ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪ್ರಚಾರ

ಚನ್ನಗಿರಿ, ಏ.21- ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.

ಚನ್ನಗಿರಿ ತಾಲ್ಲೂಕಿನ ರಾಜಗೊಂಡನಹಳ್ಳಿ, ತಿಪ್ಪಗೊಂಡನಹಳ್ಳಿ, ಹೊನ್ನೇಬಾಗಿ, ಅಜ್ಜಿಹಳ್ಳಿ, ನಲ್ಲೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿ ಅವರು ಮಾತನಾಡಿದರು.

ಚನ್ನಗಿರಿ ತಾಲ್ಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು. ತಾಲ್ಲೂಕಿನಲ್ಲಿ ವಿಶೇಷ ಆರ್ಥಿಕ ವಲಯ ಸೃಜನೆಗೆ ವಿಫುಲ ಅವಕಾಶಗಳಿದ್ದು, ಅವುಗಳ ಯಶಸ್ವಿ ಅನುಷ್ಠಾನಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ತುಮ್ಕೋಸ್‌ಗೆ ತಾಲ್ಲೂಕು ಸೇರಿದಂತೆ ಅಕ್ಕಪಕ್ಕದ ತಾಲ್ಲೂಕಿನ ಬೆಳೆಗಾರರು ಅಡಿಕೆ ತಂದು ಮಾರಾಟ ಮಾಡುತ್ತಾರೆ. ಇಲ್ಲಿ ಹೆಚ್ಚಿನ ಆರ್ಥಿಕ ವಹಿವಾಟು ನಡೆಯುತ್ತಿದ್ದು, ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ. ತಾಲ್ಲೂಕಿನಲ್ಲಿ ವಿಶೇಷ ಆರ್ಥಿಕ ವಲಯ ರಚನೆ ಮಾಡಲು ನನಗೆ ಮತ ನೀಡುವ ಮೂಲಕ ಅವಕಾಶ ನೀಡಿ ಎಂದು ಮನವಿ ಮಾಡಿದರು.

ಚನ್ನಗಿರಿ ತಾಲ್ಲೂಕಿನಲ್ಲಿ ಪ್ರವಾಸೋದ್ಯಮಕ್ಕೂ ಸಾಕಷ್ಟು ಅವಕಾಶಗಳಿವೆ. ಈಗಾಗಲೇ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ತಾಲ್ಲೂಕಿನ ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಶಾಂತಿಸಾಗರದಲ್ಲಿ ಅತಿಥಿ ಗೃಹ, ಜಲಕ್ರೀಡಾ ಚಟುವಟಿಕೆಗೆ ಆದ್ಯತೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ, ಚಿತ್ರದುರ್ಗ ತಾಲ್ಲೂಕುಗಳ 121 ಕೆರೆಗಳಿಗೆ ನೀರು ತುಂಬಿಸುವ ರೂ.597 ಕೋಟಿಯ ಸಾಸ್ಟೆಹಳ್ಳಿ ಏತ ನೀರಾವರಿ ಯೋಜನೆ ಬಿಜೆಪಿ ಸರ್ಕಾರದ ಸಾಧನೆಯೇ ವಿನಃ, ಇದರಲ್ಲಿ ಕಾಂಗ್ರೆಸ್ ಪಕ್ಷದ ಶ್ರಮ ಎಳ್ಳಷ್ಟು ಇಲ್ಲ. ಮುಗಿದಿರುವ ಕಾಮಗಾರಿ ಪೂರ್ಣಗೊಳಿಸುವುದೇ ನನ್ನ ಆದ್ಯತೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಈ ಯೋಜನೆಯ ಗಂಧಗಾಳಿಯೂ ಗೊತ್ತಿಲ್ಲ ಎಂದು ಗಾಯತ್ರಿ ಸಿದ್ದೇಶ್ವರ ಹೇಳಿದರು.

ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಮಾತನಾಡಿ, ಸಂಸದ ಸಿದ್ದೇಶಣ್ಣ ಅವರು ಚನ್ನಗಿರಿ ತಾಲ್ಲೂಕಿನ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಸಂಸದರ ಪ್ರದೇಶಾಭಿವೃದ್ಧಿ ಅನುದಾನ ಹೊರತುಪಡಿಸಿ ಕೇಂದ್ರದಿಂದ ವಿವಿಧ ಯೋಜನೆಗಳಲ್ಲಿ ಅನುದಾನ ತಂದು ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ. ಈಗ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸಿದರೆ ಚನ್ನಗಿರಿ ತಾಲ್ಲೂಕನ್ನು ಮಾದರಿ ತಾಲ್ಲೂಕನ್ನಾಗಿ ಅಭಿವೃದ್ಧಿ ಮಾಡುತ್ತಾರೆ ಎಂದರು.

ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಡಿಕೆ ಬೆಳೆಗಾರರಿಗೆ ಅನೂಕೂಲವಾಗಿದೆ. ಮೊದಲು ಬೇರೆ ರಾಷ್ಟ್ರದಿಂದ ಕಡಿಮೆ ಬೆಲೆಗೆ ಆಮದು ಮಾಡಿಕೊಂಡು ಇಲ್ಲಿನ ರೈತರಿಗೆ ತೊಂದರೆ ಕೊಡುತ್ತಿದ್ದರು. ಈಗ ಬೇರೆ ರಾಷ್ಟ್ರದಿಂದ ಆಮದು ಮಾಡಿಕೊಂಡರೂ ಆಮದು ಬೆಲೆ ನಿಗದಿ ಮಾಡಿದ್ದಾರೆ. ಹಾಗಾಗಿ ಅಡಿಕೆ ಬೆಲೆ 35 ಸಾವಿರಕ್ಕಿಂತ ಕಡಿಮೆ ಆಗುತ್ತಿಲ್ಲ. ಮೋದಿ ಅವರು ರೈತರಿಗೆ ಬೆಲೆ ಗ್ಯಾರಂಟಿ ಕೊಟ್ಟಿದ್ಧಾರೆ ಎಂದರು.

ಮಾಜಿ ಸಚಿವ ಮುರುಗೇಶ್ ನಿರಾಣಿ ಪತ್ನಿ ಕಮಲಾ ನಿರಾಣಿ ಸೇರಿದಂತೆ ಚನ್ನಗಿರಿ ವಿಧಾನ ಸಭಾ ಕ್ಷೇತ್ರದ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!