ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಿಂದ ಸಮಸ್ಯೆಗೆ ಸ್ಪಂದನೆ: ಎಸ್ಸೆಸ್
ದಾವಣಗೆರೆ, ಮೇ 29- ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಹೊರತಾಗಿ ಬೇರೆಯವರಿಗೆ ಮತ ನೀಡಿದರೆ ಪ್ರಯೋಜನವಿಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿದರೆ ಅವರು ವಿರೋಧ ಪಕ್ಷದ ಸಾಲಿನಲ್ಲಿ ಕುಳಿತು ಎದ್ದು ಹೋಗಬೇಕಾಗುತ್ತದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಗೆಲ್ಲಿಸಿದರೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಈ ಹಿಂದೆ ಭರವಸೆ ನೀಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ ಎಂದವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಮುಂದಿನ ನಾಲ್ಕು ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರಲಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದರೆ ನಾವೂ ಬೆಂಬಲ ನೀಡಿ ಒಳ್ಳೆಯ ತಂಡವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.
ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಶಿಕ್ಷಕರು ಹಾಗೂ ಸರ್ಕಾರಿ ನೌಕರರನ್ನು ಕಾಪಾಡುತ್ತಾ ಬಂದಿದೆ. 6ನೇ ವೇತನ ಆಯೋಗದ ವರದಿ ಜಾರಿಗೆ ತಂದಿದ್ದು ಹಿಂದಿನ ಸಿದ್ದರಾಮಯ್ಯ ಸರ್ಕಾರ. ಈಗಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ 7ನೇ ವೇತನ ಆಯೋಗದ ವರದಿ ಜಾರಿಗೆ ಬರುತ್ತಿದೆ ಎಂದರು.
ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲಾಗುವುದು. ಅನುದಾನಿತ ಶಾಲಾ ಶಿಕ್ಷಕರನ್ನೂ ಹಳೆಯ ಪಿಂಚಣಿ ಯೋಜನೆಗೆ ತರಲಾಗುವುದು ಎಂದವರು ಭರವಸೆ ನೀಡಿದರು.
ಅನುದಾನಿತ ಶಾಲೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಮಾಡಲಾಗುವುದು. ಶಿಕ್ಷಣ ಕ್ಷೇತ್ರದಲ್ಲಿನ ಹಲವಾರು ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಲೆಕ್ಕ ಪರಿಶೋಧಕ ಅಥಣಿ ವೀರಣ್ಣ, ಉದ್ಯಮಿ ಅಣಬೇರು ರಾಜಣ್ಣ, ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಎ. ನಾಗರಾಜ್, ಕಾಂಗ್ರೆಸ್ ಮುಖಂಡ ದಿನೇಶ್ ಕೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.