ಕೊಗ್ಗನೂರಿನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಬಸವಂತಪ್ಪ ಭೇಟಿ – ಪರಿಶೀಲನೆ
ದಾವಣಗೆರೆ, ಜೂ. 6 – ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳಿಂದ ಅಡುಗೆ ಮಾಡಿ ಮಕ್ಕಳಿಗೆ ಬಡಿಸಿದರೆ ಮಕ್ಕಳ ಆರೋಗ್ಯದ ಸ್ಥಿತಿ ಹದಗೆಡುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಂಗನ ವಾಡಿ ಕಾರ್ಯಕರ್ತೆಯನ್ನು ತರಾಟೆಗೆ ತೆಗೆದುಕೊಂಡರು.
ತಾಲ್ಲೂಕಿನ ಕೊಗ್ಗನೂರು ಗ್ರಾಮದ ಅಂಗನವಾಡಿ ಕೇಂ ದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬೂಸ್ಟ್ ಹಿಡಿದ ಬೆಲ್ಲ, ಕಳಪೆ ಸಾಂಬಾರದ ಪುಡಿ, ರವೆ ಸೇರಿದಂತೆ, ವಿತರಣೆಯಾದ ಎಲ್ಲಾ ರೀತಿಯ ಆಹಾರ ಪದಾರ್ಥಗಳು ಕಳಪೆಯಾಗಿರುವುದನ್ನು ಕಂಡು ಕೆಂಡಾಮಂಡಲರಾದರು.
ಅಂಗನವಾಡಿ ಕೇಂದ್ರದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಸಲು ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಆದರೆ ಇಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಆಹಾರ ತಯಾರಿಸಲಾಗುತ್ತಿದೆ. ಏನಾದರೂ ಸಂಭವಿಸಿದರೆ ಯಾರು ಹೊಣೆ ಎಂದು ಅಂಗನವಾಡಿ ಕೇಂದ್ರದ ಸಿಬ್ಬಂದಿ, ಕಾರ್ಯಕರ್ತೆಯನ್ನು ಪ್ರಶ್ನಿಸಿದರು.
ಮಧ್ಯಾಹ್ನವಾದರೂ ಮಕ್ಕಳ ಹಾಜರಿ ಪುಸ್ತಕದಲ್ಲಿ ಮಕ್ಕಳ ಹಾಜರಿ ಹಾಕಿಲ್ಲ. ಕೇವಲ ಇಬ್ಬರು ಮಕ್ಕಳು ಇದ್ದಾರೆ. ಸಂಜೆ ವೇಳೆಗೆ ಅವರಿಗೆ ಇಷ್ಟ ಬಂದಷ್ಟು ಮಕ್ಕಳ ಹಾಜರಿ ಹಾಕಲಾಗುತ್ತಿದೆ. ಸ್ಟಾಕ್ ಪುಸ್ತಕ ಅಂಗನವಾಡಿ ಕೇಂದ್ರದಲ್ಲಿ ಇಟ್ಟಿಲ್ಲ, ಮನೆಯಲ್ಲಿ ಇಟ್ಟಿರುವುದಾಗಿ ಹೇಳುತ್ತಾರೆ. ರಿಮಾರ್ಕ್ ಪುಸ್ತಕದಲ್ಲಿ ಇಲ್ಲಿನ ಸಮಸ್ಯೆಗಳ ದಾಖಲು ಮಾಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಕ್ರಮ ತೆಗೆದುಕೊಳ್ಳಬೇಕೆಂದರು.
ಮಾಯಕೊಂಡ ಕ್ಷೇತ್ರದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಇದೇ ರೀತಿಯ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಲಾಗುತ್ತಿದೆ ಎಂದು ಪೋಷಕರಿಂದ ದೂರುಗಳು ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಳಪೆ ಗುಣಮಟ್ಟದ ಆಹಾರ ಪೂರೈಸುವ ಏಜೆನ್ಸಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಕಳಪೆ ಗುಣಮಟ್ಟದ ಆಹಾರ ಸೇವಿಸಿ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದರೆ ಅಧಿಕಾರಿಗಳನ್ನು ಹೊಣೆ ಯನ್ನಾಗಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಯವುದು ಎಂದು ಎಚ್ಚರಿಕೆ ನೀಡಿದರು.
ಅಲ್ಲದೇ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶದಿಂದ ಕೂಡಿದ ಆಹಾರ ಸಮರ್ಪಕವಾಗಿ ನೀಡುತ್ತಿಲ್ಲ. ಇದೇ ರೀತಿ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ. ಅದಲ್ಲದೇ ಅಶುಚಿತ್ವ ಮತ್ತು ಮೂಲಸೌಕರ್ಯದ ಕೊರತೆ ಎದ್ದು ಕಾಣುತ್ತಿವೆ. ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಇಂತಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ ಪರೀಕ್ಷೆ ಮಾಡುತ್ತಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ವಾರದಲ್ಲಿ ಒಂದು ಬಾರಿ ಅಂಗನವಾಡಿ ಕೇಂದ್ರಗಳಿಗೆ ನೀಡಿ ಆಹಾರದ ಗುಣಮಟ್ಟ ಪರೀಕ್ಷೆ ಮಾಡಬೇಕೆಂದು ತಾಕೀತು ಮಾಡಿದರು.