ದಾವಣಗೆರೆ, ಜೂ.10- ಇದೇ ದಿನಾಂಕ 21ರಂದು ಜಿಲ್ಲಾ ಮಟ್ಟದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯುಷ್ ಅಧಿಕಾರಿ ಯೋಗೇಂದ್ರ ಕುಮಾರ್ ತಿಳಿಸಿದರು.
ನಗರದ ಸರ್ಕಾರಿ ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯಲ್ಲಿ ಸೋಮವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಚರ್ಚಿಸಿದ ಅವರು, ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಗುವುದು ಎಂದು ತಿಳಿಸಿದರು.
`ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ಈ ಬಾರಿ ಯೋಗ ದಿನ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿನ ಸ್ವಯಂ ಸೇವಕರು, ಶಾಲಾ-ಕಾಲೇಜಿನ ವಿದ್ಯಾ ರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್‌ಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 4ರಿಂದ 5 ಸಾವಿರ ಜನರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಯೋಗೋತ್ಸವ…!
ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂ.10 ರಿಂದ 20ರ ವರೆಗೆ `ಯೋಗೋತ್ಸವ’ ಶೀರ್ಷಿಕೆಯಡಿ ವಿವಿಧ ಸಂಘಟನೆಯ ಸಹಯೋಗದಲ್ಲಿ ಯೋಗ, ರಸ ಪ್ರಶ್ನೆ, ಕ್ರೀಡೆ, ಸಮೂಹ ನೃತ್ಯ, ಆಶುಭಾಷಣ ಮತ್ತು ಬೋಧನಾ ಕೌಶಲ್ಯ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ.
ಯೋಗ ಒಕ್ಕೂಟದ ಜಿಲ್ಲಾಧ್ಯಕ್ಷ ವಾಸುದೇವ ರಾಯ್ಕರ್ ಮಾತನಾಡಿ, ಯೋಗ ಕೇವಲ ದೈಹಿಕ ವ್ಯಾಯಾಮವಲ್ಲ. ಮನಸ್ಸು, ದೇಹ ಮತ್ತು ಆತ್ಮವನ್ನು ಒಳಗೊಳ್ಳುವ ಅಭ್ಯಾಸ ಇದಾಗಿದೆ ಎಂದು ತಿಳಿಸಿದರು. ವಾಕಥಾನ್ ಆಯೋಜಿಸಲಾಗಿದ್ದು, ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಈ ವೇಳೆ ಸರ್ಕಾರಿ ಪ್ರಕೃತಿ ಚಿಕಿತ್ಸೆಯ ಆಡಳಿತ ವೈದ್ಯಾಧಿಕಾರಿ ಡಿ.ಎಂ. ರತ್ನಾ, ವೈದ್ಯಾಧಿಕಾರಿ ಡಾ. ಸಿದ್ದೇಶ್ ಈ ಬಿಸನಳ್ಳಿ, ಸುರೇಶ್, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕ ರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ, ಕೆಜಿಎಎಂಒಎನ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಬೂದಿಹಾಳ ಮತ್ತಿತರರಿದ್ದರು.