ಪೋಷಕರಿಗೆ ಎಸ್ಪಿ ಉಮಾ ಪ್ರಶಾಂತ್ ಕರೆ
ದಾವಣಗೆರೆ, ಜು.3- ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಬೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಎಲ್ಲಾ ಹಂತದಲ್ಲಿ ಪೋಷಕರು ಆದ್ಯತೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಭಾನುವಳ್ಳಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಎಂ.ಟಿ.ಪಿ ಕಾಯ್ದೆ, ಪಿ.ಎನ್.ಡಿ.ಪಿ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
16 ರಿಂದ 18 ವರ್ಷ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಕನಿಷ್ಠ 10 ವರ್ಷಗಳ ಸೆರೆವಾಸ, ಜೀವಾವಧಿ ಶಿಕ್ಷೆ ಮತ್ತು ದಂಡ ವಿಸ್ತರಿಸಬಹುದು. 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರೆ ಕನಿಷ್ಠ 20 ವರ್ಷಗಳ ಸೆರೆವಾಸ, ಜೀವನದ ಉಳಿದ ಅವಧಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರೆಯುವುದಿಲ್ಲ. ದುಷ್ಕೃತ್ಯಕ್ಕೆ ನೇರವಾಗಿ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದವರಿಗೂ ಈ ಕಾಯ್ದೆಯಡಿ ಶಿಕ್ಷೆ ಇದೆ ಎಂದು ಹೇಳಿದರು.
ಪ್ರೀತಿ, ಪ್ರೇಮವೆಂಬ ಆಕರ್ಷಣೆಗೆ ಒಳಗಾಗದೇ ಚನ್ನಾಗಿ ಓದಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು. ತಂದೆ-ತಾಯಿ ಕಂಡ ಕನಸುಗಳನ್ನು ನನಸು ಮಾಡಿ, ನಿಮ್ಮ ಭವಿಷ್ಯ ಉಜ್ವಲವಾಗಿ ರೂಪಿಸಿಕೊಳ್ಳಲು ಶ್ರಮಪಡಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ, ಶಿಕ್ಷಣ ಇಲಾಖೆಯೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕನಿಷ್ಠ ಇಬ್ಬರು ಸದಸ್ಯರು, ಮತ್ತು ಬೀಟ್ ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಾಧಿಕಾರಿ, ಶಾಲೆ ಮುಖ್ಯೋಪಾಧ್ಯಾಯರು ಇವರನ್ನು ಒಳಗೊಂಡಂತೆ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಕಾಯ್ದೆ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.
ಆರ್.ಎಲ್. ಕಾನೂನು ಕಾಲೇಜು ವಿಶ್ರಾಂತ ಪ್ರಾಂಶುಪಾಲ ಡಾ.ಎಂ ಸೋಮಶೇಖರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತ ಟಿ.ಎನ್, ಹರಿಹರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹ ಕಾಧಿಕಾರಿ ರಾಮಕೃಷ್ಣ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೂರ್ಣಿಮ.ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಆರಕ್ಷಕ ವೃತ್ತ ನಿರೀಕ್ಷಕ ಸುರೇಶ್ ಸಗರಿ, ಹಿರಿಯ ವೈದ್ಯಾಧಿಕಾರಿ ಡಾ.ಪ್ರಶಾಂತ್ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.