ಜಿಲ್ಲಾಸ್ಪತ್ರೆ ಅಭಿವೃದ್ಧಿ ಕಾರ್ಯ ಚುರುಕುಗೊಳಿಸಿ

ಜಿಲ್ಲಾಸ್ಪತ್ರೆ ಅಭಿವೃದ್ಧಿ ಕಾರ್ಯ ಚುರುಕುಗೊಳಿಸಿ

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ಸೆಸ್ಸೆಂ ಸೂಚನೆ

ದಾವಣಗೆರೆ, ಜು. 30- ಜಿಲ್ಲಾಸ್ಪತ್ರೆಯ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸು ವಂತೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್. ಮಲ್ಲಿಕಾರ್ಜುನ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ಮೊದಲ ತ್ರೈ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡಿದರು. 

ಆರೋಗ್ಯ ಸಚಿವರು ಜಿಲ್ಲೆಗೆ ಬಂದಾಗ ಚಿಗಟೇರಿ ಆಸ್ಪತ್ರೆ ಹೊಸ ಬ್ಲಾಕ್ ನಿರ್ಮಾಣಕ್ಕೆ 18 ಕೋಟಿ  ಮಂಜೂರು ಮಾಡಿದ್ದಾರೆ. ಹಳೇ ಆಸ್ಪತ್ರೆಯಲ್ಲಿ ಹೊರ ರಾಂಪ್ ನಿರ್ಮಿಸಬೇಕಿದೆ.  ವಾಟರ್ ಟ್ಯಾಂಕ್ ನಿರ್ಮಾಣವೂ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ಲಾನನ್ನು ತಂದು ತೋರಿಸಿ ಅನುಮೋದನೆ ಪಡೆದು ಕಾಮಗಾರಿ ಕೈಗೊಳ್ಳಲು ಜಿಲ್ಲಾ ಸರ್ಜನ್‌ಗೆ ತಿಳಿಸಿದರು. 

ಈ ವರ್ಷ ಜಿಲ್ಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 16 ರಿಂದ 23 ನೇ ಸ್ಥಾನಕ್ಕಿಳಿದಿದ್ದು ಫಲಿತಾಂಶ ಸುಧಾರಣೆಗಾಗಿ ಕ್ರಮ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಮತ್ತು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯುವಂತಹ ವಿಷಯಗಳಿದ್ದಲ್ಲಿ, ಆಯಾ ಕ್ಷೇತ್ರದ ಶಾಸಕರ ಗಮನಕ್ಕೆ ತರಬೇಕು ಮತ್ತು ಶೈಕ್ಷಣಿಕ ಗುಣಮಟ್ಟ ಉತ್ತಮಪಡಿಸಲು ಯೋಜನೆ ರೂಪಿಸಿ, ಅನುಷ್ಠಾನ ಮಾಡಲು ಉಪನಿರ್ದೇಶಕರಿಗೆ ಸೂಚನೆ ನೀಡಿ, ಶಿಕ್ಷಣ ಇಲಾಖೆ ಆಯುಕ್ತಾಲಯಕ್ಕೆ ನಡೆಸಲಾದ ಪತ್ರ ವ್ಯವಹಾರದ ಪ್ರತಿಯನ್ನು ಶಾಸಕರುಗಳಿಗೆ ನೀಡಲು ತಿಳಿಸಿದರು. 

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯ ರೈತರ ಜೀವನಾಡಿ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ರೈತರಲ್ಲಿ ಆಶಾ ಭಾವನೆಯನ್ನು ಮೂಡಿಸಿದ್ದು, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಯಾವುದೇ ಅಧಿಕಾರಿಗಳು ಜಿಲ್ಲೆಗೆ ಹೊಸದಾಗಿ ಬಂದಾಗ ಸಂಬಂಧಿಸಿದ ಶಾಸಕರನ್ನು ಸಂಪರ್ಕಿಸಿ ಆಯಾ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳು, ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಕಾಮಗಾರಿಗಳನ್ನು ಅನುಷ್ಟಾನ ಮಾಡುವಾಗ ಶಾಸಕರ ಗಮನಕ್ಕೆ ತರಬೇಕು ಮತ್ತು ಇದರ ಶಂಕುಸ್ಥಾಪನೆ, ಉದ್ಘಾಟನೆಯನ್ನು ಕೈಗೊಳ್ಳುವಾಗ ಇವರನ್ನು ಆಹ್ವಾನಿಸಬೇಕು ಮತ್ತು ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವಾಗಲೂ ಮಾಹಿತಿ ನೀಡಬೇಕು, ಈ ಬಗ್ಗೆ ಜಿಲ್ಲಾಧಿಕಾರಿಗಳು ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಲು ಸೂಚನೆ ನೀಡಿದರು.

ಸಭೆಯಲ್ಲಿ ಜಗಳೂರು ಶಾಸಕ  ಬಿ.ದೇವೇಂದ್ರಪ್ಪ, ಮಾಯಕೊಂಡ ಶಾಸಕ  ಕೆ.ಎಸ್.ಬಸವಂತಪ್ಪ, ಹೊನ್ನಾಳಿ ಶಾಸಕ  ಡಿ.ಜಿ.ಶಾಂತನಗೌಡ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಕೆ.ಎಸ್.ನವೀನ್, ಡಾ. ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಡಿ.ಬಸವರಾಜು, ಶ್ರೀಮತಿ ಶೋಭಾ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!