ಏಕಾಏಕಿ ಒಕ್ಕಲೆಬ್ಬಿಸುವುದನ್ನು ನಿಲ್ಲಿಸಿ

ಏಕಾಏಕಿ ಒಕ್ಕಲೆಬ್ಬಿಸುವುದನ್ನು ನಿಲ್ಲಿಸಿ

ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ, ಮಹಾನಗರ ಪಾಲಿಕೆಗೆ ಮುತ್ತಿಗೆ

ದಾವಣಗೆರೆ, ಸೆ. 4- ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಸ್ಥಿರ ಮತ್ತು ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜಪೇಟೆ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವ್ಯಾಪಾರಸ್ಥರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿದರು.

ಬೀದಿ ಬದಿಯ ವ್ಯಾಪಾರಿಗಳನ್ನು ಏಕಾ ಏಕಿ ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ಎಲ್ಲಾ ನೈಜ ಬೀದಿ ಬದಿಯ ವ್ಯಾಪಾರಸ್ಥರಿಗೆ ಸ್ಮಾರ್ಟ್ ಕಾರ್ಡ್ ನೀಡುವುದೂ ಸೇರಿದಂತೆ ಅಗತ್ಯ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.

ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಪ್ರತಿಭಟನಾಕಾರರು ಆಯುಕ್ತರಾದ ರೇಣುಕ ಅವರಿಗೆ ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಘದ ಮುಖಂಡರು, ಬೀದಿ ಬದಿ ವ್ಯಾಪಾರಸ್ಥರಿಗೆ ಜೀವನ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ-2014 ನ್ನು ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.

ಸ್ಮಾರ್ಟ್ ಸಿಟಿ ಯೋಜನೆ ಜಾರಿ ನೆಪದಲ್ಲಿ ಮರಗಳನ್ನು ಕಡಿದಿದ್ದರ ಪರಿಣಾಮ ಬೇಸಿಗೆಯಲ್ಲಿನ ಅಧಿಕ ತಾಪದಿಂದ ಸೊಪ್ಪು, ತರಕಾರಿ, ಹಣ್ಣು, ಆಹಾರ ಪದಾರ್ಥಗಳು ಕೆಲವೇ ಗಂಟೆಗಳಲ್ಲಿ ಒಣಗಿ ಹೋಗುತ್ತಿವೆ. ಮಳೆಗಾಲದಲ್ಲಿ ನೀರು ಬಿದ್ದು ಕೊಳೆತು ಹೋಗುತ್ತಿರುವುದರಿಂದ ಶಾಶ್ವತ ನೆರಳಿನ ವ್ಯವಸ್ಥೆ ಮಾಡಬೇಕಾದ ಅಗತ್ಯವಿದೆ. ಅಲ್ಲಿಯವರೆಗೆ ತಾತ್ಕಾಲಿಕ ಹೊದಿಕೆ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.

ಬೀದಿ ಬದಿಯ ವ್ಯಾಪಾರಸ್ಥರ ಕಲ್ಯಾಣ ಮಂಡಳಿ ನಿಧಿ ಹೆಚ್ಚಿಸಿ, ಅದರಿಂದ ಬೀದಿ ಬದಿಯ ವ್ಯಾಪಾರಸ್ಥರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ ಗುದ್ದಲಿ ಪೂಜೆ ಮಾಡಿ ಅನೇಕ ತಿಂಗಳುಗಳೇ ಕಳೆದವು, ಆದರೂ ಇದುವರೆಗೂ ಕಾಮಗಾರಿ ಆರಂಭಿಸಿಲ್ಲ. ಕೂಡಲೇ ಕಾಮಗಾರಿ ಪ್ರಾರಂಭಿ ಸಬೇಕು. ಹೊಸ ಮಾಲ್‌ಗಳಿಗೆ ಇನ್ನು ಮುಂದೆ ಅನುಮತಿ ನೀಡಬಾರದು. ಈಗಿರುವ ಮಾಲ್‌ ಗಳಲ್ಲಿ ಚಿಲ್ಲರೆ ವ್ಯಾಪಾರ ನಿಷೇಧಿಸಲು ಆದೇಶಿಸಬೇಕೆಂದು ಆಗ್ರಹಿಸಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಆಶ್ರಯ ಮನೆಗಳನ್ನು ಮಂಜೂರು ಮಾಡಬೇಕು. ಬೀದಿ ಬದಿಯ ವ್ಯಾಪಾರಿಗಳ ಗುರುತಿನ ಚೀಟಿಗಳನ್ನು ನೀಡುತ್ತಿರುವ ಅಧಿಕಾರಿಗಳು ಹಾಗೂ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು  ಮನವಿ ಮಾಡಿದರು.

ಪ್ರಮುಖ ಮಾರುಕಟ್ಟೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಿಕೊಡಬೇಕು. ತ್ಯಾಜ್ಯ ವಿಲೇವಾರಿಗೆ ಸಹಕರಿಸಬೇಕು.ಫುಟ್‌ಪಾತ್ ವ್ಯಾಪಾರಿ ಸ್ನೇಹಿ ರಸ್ತೆಗಳನ್ನು ನಿರ್ಮಿಸಬೇಕು. ಜಕಾತಿ ವಸೂಲಾತಿಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದು. ಖಾಸಗಿಯವರು ಜಕಾತಿ ಹೆಸರಿನಲ್ಲಿ ದೌರ್ಜನ್ಯ, ಶೋಷಣೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾಸದ ಎಸ್.ಕೆ. ರಹಮತ್‌ವುಲ್ಲಾ, ಎಸ್. ಇಸ್ಮಾಯಿಲ್, ದುಗ್ಗಪ್ಪ, ಹೆಚ್.ಸಿ.ಮಲ್ಲಪ್ಪ, ಶೀಲಾ ಶ್ರೀನಿವಾಸ್, ಅಣಬೇರು ತಿಪ್ಪೇಸ್ವಾಮಿ, ಕೆ. ಭಾರತಿ, ರಿಯಾಜ್ ಅಹಮದ್, ಮಂಜುನಾಥ್ ಕುಕ್ಕುವಾಡ, ಮಂಜುನಾಥ ಕೈದಾಳೆ, ಎಸ್. ಈರಣ್ಣ, ರವಿ ಮತ್ತಿತರರು ಭಾಗವಹಿಸಿದ್ದರು. 

error: Content is protected !!