ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್ ಸೂಚನೆ
ದಾವಣಗೆರೆ, ಅ. 8 – ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆಯಾಗುವಂತೆ ಕ್ರಮ ವಹಿಸಲಾಗುವುದೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಹಶೀಲ್ದಾರರು ಹಾಗೂ ಉಪವಿಭಾಗಾಧಿಕಾರಿಗಳು ಜಂಟಿಯಾಗಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪಡಿತರ ವಿತರಣೆ, ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ. ಸುರೇಶ್ ಇಟ್ನಾಳ್ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಸಿಗುವಂತಾಗಬೇಕು. ಆದ್ದರಿಂದ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆಗಳ ಮಾಹಿತಿ ಕುರಿತು ಆಂದೋಲನ ಕೈಗೊಳ್ಳಬೇಕೆಂದು ಎಲ್ಲಾ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ಯೋಜನೆಗಳು ಯಾರಿಗೆ ತಲುಪುತ್ತಿಲ್ಲ, ಅಂತವರಿಗೆ ಅರಿವು ಮೂಡಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ನೀಡುವ ಸಮಯದ ವೇಳಾಪಟ್ಟಿಯನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.
ಅನ್ಯಭಾಗ್ಯ ಯೋಜನೆಯ ಕುರಿತು ಉಪನಿರ್ದೇಶಕರು ಮಾಹಿತಿ ನೀಡಿ, ದಾವಣಗೆರೆ ಜಿಲ್ಲೆಯಲ್ಲಿ ಜುಲೈ 2023 ರಿಂದ ಜೂನ್ 2024 ರವರೆಗೆ ಒಟ್ಟಾರೆ 341792 ಪಡಿತರ ಚೀಟಿದಾರರಿದ್ದು, ಅದರಲ್ಲಿ 1226537 ಫಲಾನುಭವಿಗಳು ಅನ್ಯಭಾಗ್ಯ ಯೋಜನೆ ವ್ಯಾಪ್ತಿಗೆ ಬರುತ್ತಿದ್ದು, ಈ ಎಲ್ಲಾ ಫಲಾನುಭವಿಗಳಿಗೆ ಐದು ಕೆ.ಜಿ. ಅಕ್ಕಿಯ ಹಣವನ್ನು ಡಿ.ಬಿ.ಟಿ. ಮೂಲಕ ಪ್ರತಿ ತಿಂಗಳು ಪಾವತಿಸಲಾಗಿದೆ. 2023ರ ಜುಲೈ ನಿಂದ 2024ರ ಜುಲೈವರೆಗೆ ರೂ.247.28 ಕೋಟಿ ವೆಚ್ಚ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿ, ಗೃಹಲಕ್ಷ್ಮಿ ಯೋಜನೆಯಡಿ ಎಲ್ಲಾ ತಾಲ್ಲೂಕುಗಳಿಂದ 366937 ಫಲಾನುಭವಿಗಳು ನೊಂದಣಿಯಾಗಿದ್ದು, ಇದರಲ್ಲಿ 358289 ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಯೋಜನೆ ಆರಂಭವಾದ 2023ರ ಆಗಸ್ಟ್‍ನಿಂದ 2024ರ ಮಾರ್ಚ್‍ವರೆಗೆ ರೂ.751.38 ಕೋಟಿ ಡಿಬಿಟಿ ಮೂಲಕ ಮಹಿಳೆಯರಿಗೆ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಚಾಲ್ತಿಯಲ್ಲಿರುವ 487228 ಸ್ಥಾವರಗಳಲ್ಲಿ 433758 ಸ್ಥಾವರಗಳ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದು 53470 ಆರ್.ಆರ್.ಸಂಖ್ಯೆಯವರು ಮಾತ್ರ ಗೃಹಜ್ಯೋತಿ ಯೋಜನೆಗೆ ನೋಂದಣಿಯಾಗಿರುವುದಿಲ್ಲ ಎಂದು ಮಾಹಿತಿ ನೀಡಿದರು.
ಶಕ್ತಿ ಯೋಜನೆಯಡಿ ದಾವಣಗೆರೆ ವಿಭಾಗ ವ್ಯಾಪ್ತಿಯಲ್ಲಿ 11 ಜೂನ್ 2023 ರಿಂದ ಸೆ. 2024 ರವರೆಗೆ ಒಟ್ಟಾರೆ 5,02,97,487 ಪ್ರಯಾಣಿಕರು ಬಸ್‍ಗಳಲ್ಲಿ ಸಂಚರಿಸಿದ್ದು, ಪ್ರಯಾಣ ವೆಚ್ಚವಾಗಿ ಒಟ್ಟು ರೂ.136,65,25,048 ಗಳನ್ನು ಸರ್ಕಾರ ಭರಿಸುತ್ತಿದೆ ಎಂದು ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ ಜನವರಿ 2024 ರಿಂದ ಜುಲೈ 2024ರವರೆಗೆ 12243 ಪದವಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಪಾವತಿಯಾದ ಮೊತ್ತ ರೂ. 3,67,29,000 ಹಾಗೂ 147 ಡಿಪ್ಲೊಮೋ ಫಲಾನುಭವಿಗಳಿಗೆ ರೂ.2,20,500 ಗಳನ್ನು ಪಾವತಿಸಲಾಗಿದೆ.
ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರುಗಳಾದ ಕೆ.ಎನ್.ಮಂಜುನಾಥ, ನಂಜಾನಾಯ್ಕ, ಹನೀಪ್ ಪಾ ಹಾಗೂ ಅನುಷ್ಠಾನ ಸಮಿತಿಯ ಎಲ್ಲಾ ಸದಸ್ಯರುಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.