ದಾವಣಗೆರೆ, ನ.4- ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಲು ಆಡಳಿತದಲ್ಲಿ ಪಾರದರ್ಶಕತೆ, ನಿಸ್ವಾರ್ಥ ಸೇವೆ ಸಾರ್ವಜನಿಕ ಸೇವೆಯಲ್ಲಿ ಮೂಡಿಬರಬೇಕಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಲೋಕಾಯುಕ್ತ ವಿಭಾಗ, ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಭ್ರಷ್ಟಾಚಾರ ನಿರ್ಮೂಲನಾ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭ್ರಷ್ಟಾಚಾರವು ನಿರಂತರ ಸೇವೆ ಹಾಗೂ ಪ್ರಾಮಾಣಿಕತೆಯನ್ನು ತಿಂದು ಹಾಕುತ್ತದೆ. ಸಮಾಜ ಕಲುಷಿತಗೊಂಡರೆ, ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಪ್ರತಿಯೊಬ್ಬರು ಪಾರದರ್ಶಕವಾಗಿ ಮತ್ತು ಆತ್ಮಸಾಕ್ಷಿಯಿಂದ ತಮ್ಮ ಜವಾಬ್ದಾರಿಯ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಮಾತನಾಡಿ, ಪ್ರತಿ ಸರ್ಕಾರಿ ನೌಕರರಲ್ಲಿ ಕರ್ತವ್ಯ ಪ್ರಜ್ಞೆ, ಪ್ರಾಮಾಣಿಕತೆ ಮತ್ತು ಮಾನವೀಯತೆ ಇದ್ದಾಗ ಯಾವ ಸಮಸ್ಯೆಗಳು ಬರುವುದಿಲ್ಲ. ಮತ್ತು ಬೇರೆಯವರಿಗೆ ತೊಂದರೆಯೂ ಆಗುವುದಿಲ್ಲ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಮಾತನಾಡಿ, ನೌಕರರು ಕೆಲವೊಮ್ಮೆ ಕಾಯ್ದೆ, ಕಾನೂನಿನ ಆಚೆ ಕೆಲವು ವಿವೇಚನಾ ಅಧಿಕಾರ ಚಲಾಯಿಸುವ ಸಂದರ್ಭ ಒದಗಿಬರುತ್ತದೆ. ಅಂತಹ ಸಂದರ್ಭದಲ್ಲಿ ಪ್ರತಿ ಕೆಲಸವನ್ನು ನ್ಯಾಯಬದ್ದವಾಗಿ, ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಕರ್ತವ್ಯನಿಷ್ಠೆಯಿಂದ ಸಮರ್ಪಕವಾಗಿ ಇರಬೇಕೆಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ.ಕರೆಣ್ಣವರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪುರೆ ಪ್ರತಿಜ್ಞಾ ವಿಧಿ ಬೋಧಿಸಿದರು.