ಸಿಜೇರಿಯನ್ ಇಳಿಕೆಗೆ ಕ್ರಮ ವಹಿಸಿ

ಸಿಜೇರಿಯನ್ ಇಳಿಕೆಗೆ ಕ್ರಮ ವಹಿಸಿ

ಖಾಸಗಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಹೆಚ್ಚಳ: ಸಹಜ ಹೆರಿಗೆಗೆ ಆದ್ಯತೆ ನೀಡಲು ಕ್ರಮಕ್ಕಾಗಿ ಡಿಸಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ದಾವಣಗೆರೆ, ನ.20- ಆಸ್ಪತ್ರೆಗಳಲ್ಲಿ ಸಹಜ ಹೆರಿಗೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಗರ್ಭಿಣಿಯರ ಮನವೊಲಿಸಲು ರಾಜ್ಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಸಿಜೇರಿಯನ್ ಹೆರಿಗೆ ಹೆಚ್ಚಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಸಾಧ್ಯವಾದಷ್ಟೂ ಸಹಜ ಹೆರಿಗೆಗೆ ಒತ್ತು ನೀಡಬೇಕಿದೆ. ಈ ಬಗ್ಗೆ ಗರ್ಭಿಣಿಯರಿಗೂ ಸೂಕ್ತ ಕೌನ್ಸಿಲಿಂಗ್ ಅಗತ್ಯವಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸರ್ಕಾರದ ಮಟ್ಟದಲ್ಲಿಯೇ ರೂಪುರೇಷೆ ತಯಾರಿಸಲಾಗುವುದು ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಶೇ.40ರಷ್ಟು ಸಿಜೇರಿಯನ್‌ ಹೆರಿಗೆ ಆಗುತ್ತಿದ್ದರೆ, ಖಾಸಗಿ ಆಸ್ಪತ್ರೆಯಲ್ಲಿ ಈ ಪ್ರಮಾಣ ಶೇ.72ರಷ್ಟಾಗಿದೆ. ಗರ್ಭಿಣಿಯರ ಒತ್ತಾಯಕ್ಕೆ ಅಥವಾ ಸುಲಭವಾಗುತ್ತದೆ ಎಂಬ ಕಾರಣಕ್ಕೋ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚು ಸಿಜೇರಿಯನ್‌ ಹೆರಿಗೆಗಳಾಗುತ್ತಿವೆ. ಈ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿ, ಆಸ್ಪತ್ರೆಯಲ್ಲಿ ಹೆಚ್ಚು ಸಿಜಿರಿಯನ್ ಆಗುತ್ತದೆ ಹಾಗೂ ಯಾವ ಕಾರಣಕ್ಕಾಗಿ ಎಂಬುದನ್ನು ತಿಳಿದು ಅವರಿಗೆ ಸಹಜ ಹೆರಿಗೆ ಸಂಖ್ಯೆ ಹೆಚ್ಚಿಸುವಂತೆ ತಾಕೀತು ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಹೇಳಿದರು.

ಸಾವಿನ ಪ್ರಮಾಣ ಇಳಿಕೆಗೆ ಸೂಚನೆ: ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 23 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಐವರು ತಾಯಂದಿರು ಸಾವನ್ನಪ್ಪಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಸರಿಯಾಗಿ ಆಡಿಟ್ ಮಾಡಿ ತಾಯಿಯ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು.

ಹೆರಿಗೆ ಸಮಯದಲ್ಲಿ ತಾಯಿ ಮಗುವಿನ ಸುರಕ್ಷೆಗೆ ಹೆಚ್ಚಿನ ಒತ್ತು ನೀಡಿದ್ದು ಮರಣ ಪ್ರಮಾಣವನ್ನು ಶೂನ್ಯಕ್ಕಿಳಿಸಬೇಕೆಂಬುದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶವಾಗಿದೆ ಎಂದರು.

ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 2018 ಜನರನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ 132 ಜನರು ಮರಣ ಹೊಂದಿದ್ದು, ಜಿಲ್ಲೆಯು ರಾಜ್ಯಕ್ಕಿಂತ ಕಡಿಮೆ ಪ್ರಗತಿ ಸಾಧಿಸಿದ್ದು ರಾಜ್ಯದಲ್ಲಿ 27 ನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಸೂಚನೆ ನೀಡಿದರು.

ಜಗಳೂರು ತಾಲ್ಲೂಕು ಆಸ್ಪತ್ರೆ ಕಟ್ಟಡ ಹಳೆಯದಾಗಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು 5 ಎಕರೆ ಜಮೀನು ಮಂಜೂರು ಮಾಡಿದ್ದಾರೆ. ನೂತನ ಕಟ್ಟಡಕ್ಕೆ ಅನುಮೋದನೆ ನೀಡುವಂತೆ ಶಾಸಕ  ಬಿ. ದೇವೇಂದ್ರಪ್ಪ ಸಚಿವರಲ್ಲಿ ಕೇಳಿದಾಗ, ಆದ್ಯತೆ ಮೇರೆಗೆ ಕಟ್ಟಡ ಮಂಜೂರು ಮಾಡುವುದಾಗಿ ಸಚಿವರು ಹೇಳಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಶಿವಕುಮಾರ್, ಆರೋಗ್ಯ ಅಭಿಯಾನದ ನಿರ್ದೇಶಕ  ಡಾ. ನವೀನ್ ಭಟ್ ವೈ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ಜಿಲ್ಲಾ ಸರ್ಜನ್ ಡಾ. ನಾಗೇಂದ್ರಪ್ಪ ಹಾಗೂ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!