ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ

ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ

ಡಿಸಿ ಕಛೇರಿಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಬಸವಂತಪ್ಪ

ದಾವಣಗೆರೆ, ಡಿ.5- ವಿಕಲಚೇತನರು ಮತ್ತು ಅವರ ಅವಲಂಭಿಸಿದ ಕುಟುಂಬ ನೆಮ್ಮದಿಯಿಂದ ಜೀವನ ನಡೆಸುವುದೇ ಕಷ್ಟ. ಅಂತಹದರಲ್ಲಿ ಅವರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ಹಣ ವಸೂಲಿ ಮಾಡುವುದು ದೊಡ್ಡ ಪಾಪ ಅಲ್ಲವೇ ಎಂದು ಮಾಯಕೊಂಡ  ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಜಿ.ಪಂ., ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ-ಸಂಸ್ಥೆಗಳ ಆಶ್ರಯದಲ್ಲಿ  ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ವಿಕಲಚೇತನರಿಗಾಗಿ ಮೋಟಾರು ಸೈಕಲ್, ಪಿಂಚಣಿ, ಬಸ್ ಪಾಸ್, ಸಾಲಸೌಲಭ್ಯ ಸೇರಿದಂತೆ ಹಲವಾರು ಸೌಲಭ್ಯ ಕಲ್ಪಿಸಿದೆ. ಆದರೆ ಅವರಿಗೆ ಆ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿ ಗಳು  ಆಯಾ ಸೌಲಭ್ಯಗಳ ಅನುಗುಣವಾಗಿ 2 ರಿಂದ  8 ಸಾವಿರ ರೂ. ಹಣ ವಸೂಲಿ ಮಾಡಲಾಗು ತ್ತಿದೆ ಎಂದು ಫಲಾನುಭವಿಗಳಿಂದ ನಮಗೆ ದೂರುಗಳು ಬರುತ್ತವೆ. ವಿಕಲಚೇತನರ ಪೋಷಕರು ಮೊದಲೇ ಅವರ ಪೋಷಣೆ ಮತ್ತು ಕುಟುಂಬ ನಿರ್ವಹಣೆ ಕಷ್ಟವಾಗಿರುತ್ತದೆ. ಹೀಗಿರುವಾಗ ಅವರಿಂದ ಹಣ ವಸೂಲಿ ಮಾಡಬಹುದೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಕಲಚೇತರಿಗೆ ಕೇವಲ 50 ಸಾವಿರದಿಂದ 1 ಲಕ್ಷದವರೆಗೆ ಸಾಲಸೌಲಭ್ಯ ಕಲ್ಪಿಸಿದರೆ ಸಾಲಾದು, ಅವರಿಗೆ 10 ರಿಂದ 15 ಲಕ್ಷದವರೆಗೆ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡ್ಡಿರಹಿತ ಸಾಲಸೌಲಭ್ಯ ನೀಡಿದರೆ ಅವರು ಗುಡಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ ಎಂದರು.

ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಸ್ವಾವಲಂಬಿ ಜೀವನ ನಡೆಸಲು ಪೂರಕವಾದ ವಾತಾವರಣ ಕಲ್ಪಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಬೇಕೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ   ಅವರು ಮಾತನಾಡಿ, ಛಲ, ಶ್ರದ್ಧೆ ಇದ್ದರೆ ಯಾವ ಕ್ಷೇತ್ರದಲ್ಲಾದರೂ ಮುಂದೆ ಬರಬಹುದು. ವಿಕಲಚೇತನರು ಸಾಲ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಿಕೊಳ್ಳ ಬೇಕು. ಸರ್ಕಾರಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ವಿಕಲಚೇತನ ರಿಂದ ಹಣ ವಸೂಲಿ ಮಾಡುವ ಬಗ್ಗೆ ಫಲಾನುಭವಿಗಳ ದೂರುಗಳು ಬರುತ್ತಿವೆ. ಈ ಬಗ್ಗೆ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದುಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಹಾನಗರಪಾಲಿಕೆ ಮೇಯರ್ ಚಮನ್ ಸಾಬ್, ಎಎಸ್ಪಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜನಾಯ್ಕ್,  ಉಪ ನಿರ್ದೇಶಕ ಡಾ. ಪ್ರಕಾಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

error: Content is protected !!