ದಾವಣಗೆರೆ, ಡಿ.20- ಸಂಸತ್ ಅಧಿವೇಶನದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಶಾ ಸಿದಿಗಿ ಮೆರವಣಿಗೆ ಸಹಿತ ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರಜಾಪ್ರಭುತ್ವ ದೇಶದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದಡಿ ಜನರು ಬದುಕು ಕಟ್ಟಿಕೊಂಡಿದ್ದಾರೆ. ಪ್ರಸ್ತುತ ಸಮಾಜದಲ್ಲಿ ನಾಗರಿಕರಿಗೆ ಸಮಗ್ರ ಸವಲತ್ತು ಸಿಕ್ಕಿದೆ ಎಂದಾದರೆ ಅದು ಅಂಬೇಡ್ಕರ್ ನೀಡಿದ ದೊಡ್ಡ ಕೊಡುಗೆ. ಅಂಬೇಡ್ಕರ್ ವಿರುದ್ಧ ಗೃಹಮಂತ್ರಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು.
ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ಬಗ್ಗೆ ಗೌರವ ಇಲ್ಲ. ಗಾಂಧೀಜಿ ಅವರನ್ನು ಕೊಂದ ಗೂಡ್ಸೆಗೆ ಅಭಿಷೇಕ ಮಾಡುವ ಬಿಜೆಪಿ ಮುಖಂಡರಿಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ದೇಶವೇ ಆಕ್ರೋಶ ವ್ಯಕ್ತಪಡಿಸಿದೆ. ಈ ಕೂಡಲೇ ಅವರು ರಾಜೀನಾಮೆ ನೀಡಬೇಕು. ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಕಾಂಗ್ರೆಸ್ ಪರಿಶಿಷ್ಟ ಜಾತಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ, ಪಾಲಿಕೆ ಸದಸ್ಯ ಎ.ನಾಗರಾಜ್, ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ರಾಕೇಶ್, ಎಸ್. ಮಲ್ಲಿಕಾರ್ಜುನ್, ಬಿ.ಕೆ.ಪರಶುರಾಮ್, ಅನಿತಾಬಾಯಿ ಮಾಲತೇಶ ಜಾಧವ್, ಸಾಗರ್, ಜಯಣ್ಣ, ಜಿ.ಸಿ. ನಿಂಗಪ್ಪ ಉಪಸ್ಥಿತರಿದ್ದರು.