ದಾವಣಗೆರೆ, ಡಿ. 27 – ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಒಂದು ಪಕ್ಷದ ಕಾರ್ಯಕ್ರಮವಾಗಿ ಆಯೋಜನೆಗೊಂಡಿ ರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡರು ಹೇಳಿದರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮ್ಮೇಳನಗಳು ನಡೆದಿವೆ. ಸಮ್ಮೇಳನದಲ್ಲಿ ರಾಜ್ಯ ಸರ್ಕಾರಕ್ಕೆ ವರದಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಗಡಿ ಕನ್ನಡ ಶಾಲೆಗಳ ವಿಚಾರ, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಮುಂತಾದ ಸಮಸ್ಯೆಗಳ ಬಗ್ಗೆ ಕ್ರಮಕ್ಕೆ ಮುಂದಾಗುವುದಾಗಿ ಘೋಷಿಸಿ ಹಿಂಪಡೆದಿರುವುದನ್ನು ಖಂಡಿಸಿದರು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿಯನ್ನು ಜಾರಿಗೆ ತರುವಂತೆ ಸಮ್ಮೇಳನದಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಒತ್ತಾಯಿಸುವಂತೆ ಸಮ್ಮೇಳನದ ಸರ್ವಾಧ್ಯಕ್ಷರಲ್ಲಿ ಮನವಿ ಮಾಡಿದರು.
ಇತ್ತೀಚಿನ ಸಮ್ಮೇಳನಗಳು ನಾಡು-ನುಡಿ, ನೆಲ-ಜಲ, ಕನ್ನಡ ಗಡಿ ಭಾಗದ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಸಮ್ಮೇಳನ ಒಂದು ಪಕ್ಷಕ್ಕೆ ಸೀಮಿತವಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎರಬಾಳು ಕವಿತಾ, ಉತ್ತರ ಕರ್ನಾಟಕದ ಅಧ್ಯಕ್ಷ ಲಕ್ಷ್ಮಣ ಕಂಬಾಗಿ, ಬೆಳಗಾವಿ ವಿಭಾಗೀಯ ಅಧ್ಯಕ್ಷ ರಾಜ್ ಶಿರಹಟ್ಟಿ, ಕವಡೆ ಚಲನಚಿತ್ರ ನಾಯಕ ನಟ ರಘು, ನಾಯಕ ನಟಿ ಪ್ರೇರಣಾ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು, ಮಹಿಳೆಯರು ಭಾಗವಹಿಸಿದ್ದರು.