ಜಿಲ್ಲಾಡಳಿತದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ ಆಶಯ
ದಾವಣಗೆರೆ, ಫೆ. 5 – ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹಿತ ನುಡಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ಇಂದು ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ಸವಿತಾ ಸಮಾಜದ ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು, ಆಗ ಮಾತ್ರ ಶ್ರೀಮಂತ, ಬಡವ, ಮೇಲು-ಕೀಳು ಎಂಬ ಮನೋಭಾವನೆ ಬರಲು ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು. ಸಮಾಜದಲ್ಲಿ ಇರುವಂತಹ ತೊಡಕುಗಳನ್ನು ತೊರೆದು ನಡೆದರೆ ಮಾತ್ರ ಅಭಿವೃದ್ದಿ ಸಾಧಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ನಗರದ ಶ್ರೀ ವೀರ ಮದಕರಿ ನಾಯಕ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ಸವಿತಾ ಸಮಾಜದ ಸಮುದಾಯ ಭವನವನ್ನು ಪೂರ್ಣಗೊಳಿಸಲು ಸಚಿವರೊಂದಿಗೆ ಮಾತನಾಡಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಸವಂತಪ್ಪ ಭರವಸೆ ನೀಡಿದರು.
ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಮಾರ್ಗದರ್ಶಿಯಾಗಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸವಿತಾ ಮಹರ್ಷಿ ಜಯಂತಿ ಆಚರಣೆ ಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.
ದೂಡಾ ಅಧ್ಯಕ್ಷ ದಿನೇಶ್.ಕೆ. ಶೆಟ್ಟಿ, ಪಾಲಿಕೆ ಮಹಾಪೌರರಾದ ಕೆ. ಚಮನ್ ಸಾಬ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ತಹಶೀ ಲ್ದಾರ್ ಅಶ್ವಥ್, ಸಂಘದ ಜಿಲ್ಲಾಧ್ಯಕ್ಷ ಬಾಲ ರಾಜ್, ವಕೀಲ ಎನ್. ರಂಗಸ್ವಾಮಿ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.