ಶಿಕ್ಷಣವು ಜ್ಞಾನ-ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣ

ಶಿಕ್ಷಣವು ಜ್ಞಾನ-ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣ

ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆಹ್ಲೋಟ್

ದಾವಣಗೆರೆ, ಏ.2- ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋ ಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ ಎಂದು ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. 

ದಾವಣಗೆರೆ ವಿಶ್ವವಿದ್ಯಾನಿಲಯ ದಲ್ಲಿ ಬುಧವಾರ ನಡೆದ 12ನೇ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾ ರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

ಶಿಕ್ಷಣವು ನಮಗೆ ಉದ್ಯೋಗದ ಜೊತೆಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಒದಗಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಜ್ಞಾನ ಪಡೆದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಇತ್ತೀಚಿನ ತಂತ್ರ ಜ್ಞಾನಗಳು ಮತ್ತು ಆಲೋಚನೆ ಗಳೊಂದಿಗೆ ನೀವು ಯಾವಾಗಲೂ ನಿಮ್ಮನ್ನು ನವೀಕೃತ ವಾಗಿರಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.

ಸ್ವಾತಂತ್ರ್ಯದ ನಂತರ ದೇಶವು ಎಲ್ಲಾ ಕ್ಷೇತ್ರ ಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ. ಈಗ ದೇಶದ ಆರ್ಥಿಕತೆಯು ಪ್ರಬಲವಾಗಿದ್ದು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇದನ್ನು ಮತ್ತಷ್ಟು ಬಲಪಡಿಸಲು ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮುಂಚೂಣಿಗೆ ತರಲು ನಿಮ್ಮ ಕೊಡುಗೆ ಬಹಳ ಮುಖ್ಯ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.

ತಾಪಮಾನ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಯ ನಿಟ್ಟಿನಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ. ಶಿಕ್ಷಣದಿಂದ ಪಡೆದ ಜ್ಞಾನದೊಂದಿಗೆ, ಮುಂಬರುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ ಏಕ್ ಭಾರತ್, ಶ್ರೇಷ್ಠ ಭಾರತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು. 

 ದಾವಣಗೆರೆ ವಿಶ್ವವಿದ್ಯಾಲಯವು ಕಡಿಮೆ ಅವಧಿಯಲ್ಲಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ  ಹೆಸರು ಗಳಿಸಿದೆ. ನಿರಂತರ ಮತ್ತು ಸಕಾರಾತ್ಮಕ ಪೂರ್ವಭಾವಿ ಪ್ರಯತ್ನಗಳ ಮೂಲಕ ಅಭಿವೃದ್ಧಿ ಹೊಂದಿದ ಭಾರತಕ್ಕೆ ಮಾನವ ಸಂಪನ್ಮೂಲಗಳನ್ನು ರೂಪಿಸುವಲ್ಲಿ ವಿಶ್ವವಿದ್ಯಾಲಯವು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ರಾಜ್ಯಪಾಲರು ಇದೇ ಸಂದರ್ಭದಲ್ಲಿ ಶ್ಲ್ಯಾಘಿಸಿದರು.

ಘಟಿಕೋತ್ಸವದಲ್ಲಿ ಡಾ.ಎಂ.ಸಿ. ಸುಧಾಕರ್ ಮಾತನಾಡಿ, ವಿಶ್ವವಿದ್ಯಾಲಯಗಳ ಸಮಸ್ಯೆ ಮತ್ತು ಪರಿಹಾರ ಅಧ್ಯಯನಕ್ಕಾಗಿ ಸರ್ಕಾರ ದಿಂದ ಉಪಸಮಿತಿ ರಚಿಸಲಾಗಿದೆ. ಸಮಿತಿಯು ಸದ್ಯದಲ್ಲಿಯೇ ವರದಿ ಸಲ್ಲಿಸಲಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ವರದಿಯನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಹೆಚ್ಚಿನ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವುದರಿಂದ ಗುಣ ಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಬದಲಾಗಿ ಗುಣಮಟ್ಟ ಆಧರಿಸಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕಿದೆ. ಕೃತಕ ಬುದ್ದಿಮತ್ತೆ ಹಾಗೂ ಮಷಿನ್ ಲರ್ನಿಂಗ್, ಡಾಟಾ ಸೈನ್ಸ್ ಬಳಕೆ ಮಾಡಿಕೊಂಡು ಸ್ಪರ್ಧಾತ್ಮಕತೆಯನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಾಗಿದೆ ಎಂದು ಅಭಿಪ್ರಾಯಿಸಿದರು.

ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯ ಗಳಲ್ಲಿ ಮಂಜೂರಾದ 2500 ಹುದ್ದೆಗಳು ಹಾಗೂ ಹೊಸ ಹುದ್ದೆಗಳು ಸೇರಿದಂತೆ ಸುಮಾರು 3500 ರಷ್ಟು ಹುದ್ದೆಗಳು  ಖಾಲಿ ಇವೆ. ಸಂಪುಟ ಉಪ ಸಮಿತಿ ವರದಿ ನೀಡಿದ ನಂತರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಕುಲಪತಿ ಪ್ರೊ.ಬಿ.ಡಿ.ಕುಂಬಾರ ಸ್ವಾಗತ ಭಾಷಣ ಮಾಡುತ್ತಾ, ದಾವಣಗೆರೆ ವಿಶ್ವವಿದ್ಯಾನಿಲಯವು ಶಿಕ್ಷಣದ ಜೊತೆಗೆ ಸಂಶೋಧನೆ, ಸಮುದಾಯ ಅಭಿವೃದ್ಧಿ, ಸಾಮಾಜಿಕ ಜವಾಬ್ದಾರಿಯ ಮೌಲ್ಯಿಕ ಶಿಕ್ಷಣದ ಮೂಲಕ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಗೌರವ ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್, ಕುಲಸಚಿವ ಪ್ರೊ.ಆರ್.ಶಶಿಧರ್, ವಿವಿಯ ಸಿಂಡಿಕೇಟ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

error: Content is protected !!