ದಾವಣಗೆರೆ, ಏ. 2- ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿರುವ ಕ್ರಮವನ್ನು ಖಂಡಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಶ್ರೀ ಜಯದೇವ ಮುರುಘರಾಜೇಂದ್ರ ವೃತ್ತದಿಂದ ಅರುಣಾ ಚಿತ್ರಮಂದಿರದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಾ ಬಂದಿರುವ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರ ರಾಜಕೀಯ ಶಕ್ತಿಯನ್ನು ಕುಗ್ಗಿಸಲು ಪ್ರಯತ್ನಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮತ್ತವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಡೆ ಸರಿಯಲ್ಲ ಎಂದು ಕಿಡಿಕಾರಿದರು.
ಬಸವನಗೌಡ ಪಾಟೀಲ್ ಯತ್ನಾಳ್ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ ಪ್ರತಿಭಟನಾಕಾರರು, ಬಿ.ಎಸ್. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡುವ ಮೂಲಕ ಕುಟುಂಬ ರಾಜಕಾರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಭಾವಚಿತ್ರಗಳನ್ನು ಸುಟ್ಟು, ಅವರ ವಿರುದ್ಧ `ಅಪ್ಪ ಸುಳ್ಳ, ಮಗ ಕಳ್ಳ’ ಎಂಬ ಘೋಷಣೆ ಹಾಕಿದ ಪ್ರತಿಭಟನಾಕಾರರು.
ಮಹಾಸಭಾ ಜಿಲ್ಲಾಧ್ಯಕ್ಷ ಅಶೋಕ್ ಗೋಪನಾಳು ಮಾತನಾಡಿ,ಈ ದೇಶ, ರಾಜ್ಯ ಕಂಡ ನಿಷ್ಠಾವಂತ ಮತ್ತು ಪ್ರಾಮಾಣಿಕ ರಾಜಕಾರಣಿ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟಿಸಿರುವುದು ಖಂಡನೀಯ ಎಂದರು.
ರಾಜ್ಯದಲ್ಲಿರುವ ಎರಡು ಕೋಟಿ ವೀರಶೈವ ಲಿಂಗಾಯತರಲ್ಲಿ 1.20 ಕೋಟಿ ಜನಸಂಖ್ಯೆ ಹೊಂದಿರುವ ಪಂಚಮಸಾಲಿಗಳಿಗೆ ಅಧಿಕಾರ ಕೊಟ್ಟರೆ ಮುಂದೆ ತಮಗೆ ಅಧಿಕಾರ ಸಿಗುವುದಿಲ್ಲ ಎಂಬ ದುರಾಶೆಯಿಂದ ಯತ್ನಾಳ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನೂ ನೀಡದೇ ಯಡಿಯೂ ರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ನೀಡಿ ದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಕೂಡಲೇ ಉಚ್ಛಾಟನೆಯ ಆದೇಶವನ್ನು ವಾಪಸ್ ಪಡೆದು, ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಅಶೋಕ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹೆಚ್.ಹೆಚ್. ಯೋಗೇಶ್, ರುದ್ರೇಗೌಡ, ಕೊಟ್ರೇಗೌಡ ಕ್ಯಾರಕಟ್ಟೆ, ಚನ್ನಬಸಪ್ಪ ಚಿಕ್ಕಮೇಗಳಗೇರಿ, ಶಂಕರ್ ಎಪಿಎಂಸಿ, ವಿರೂಪಣ್ಣ ಕೊಳೇನಹಳ್ಳಿ, ವಿಜಯ ಬೆಂಡಿಗೇರಿ ಮತ್ತಿತರರು ಪಾಲ್ಗೊಂಡಿದ್ದರು.