ಹರಪನಹಳ್ಳಿ ಉಪವಿಭಾಗಾಧಿಕಾರಿ ಹೆಚ್.ಜಿ.ಚಂದ್ರಶೇಖರಯ್ಯ
ಹರಪನಹಳ್ಳಿ, ಜ.5 – ಕೋವಿಡ್ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪರಿಪಾಲಿಸುವ ಮೂಲಕ ವೈರಸ್ ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಉಪವಿಭಾ ಗಾಧಿಕಾರಿ ಹೆಚ್.ಜಿ.ಚಂದ್ರಶೇಖರಯ್ಯ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ನಡೆದ ಕೋವಿಡ್- 19ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸಬಾರದು. ಜೊತೆಗೆ, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಸೇರಿದಂತೆ ಎಲ್ಲಾ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾರುಕಟ್ಟೆ, ಸಂತೆ, ಅಂಗಡಿ ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟು ನಡೆಯುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡುವ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಪುರಸಭೆ ಸಿಬ್ಬಂದಿ ಬಾಕ್ಸ್ ನಿರ್ಮಿಸುವಂತೆ ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್ ಅವರಿಗೆ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪಾರ, ವಹಿವಾಟು ಪ್ರದೇಶಗಳಲ್ಲಿ ಆಯಾ ಗ್ರಾಮ ಪಂಚಾಯ್ತಿ ಸಿಬ್ಬಂದಿ ಕೂಡಲೇ ಕ್ರಮ ವಹಿಸಲು ಸೂಚಿಸುವಂತೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಅವರಿಗೆ ಉಪವಿಭಾಗಾಧಿಕಾರಿ ಹೆಚ್.ಜಿ.ಚಂದ್ರಶೇಖರಯ್ಯ ಸೂಚನೆ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಎಂ.ಎಲ್.ನಂದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ್, ಆರೋಗ್ಯ ಇಲಾಖೆಯ ಡಾ.ಶಿವಕುಮಾರ್ ಸೇರಿದಂತೆ ಇತರರಿದ್ದರು.