ಶಾಸಕನಾಗದೆಯೂ ಸಚಿವರಾಗಬಹುದು : ಎಸ್‌ಎಆರ್
ಶಾಸಕ ಸ್ಥಾನಕ್ಕೆ ಮತ್ತೆ ಸ್ಪರ್ಧಿಸದೇ ಇದ್ದರೂ ಸಹ, ಸಚಿವ ಸ್ಥಾನ ಪಡೆಯಲು ಅವಕಾಶ ಇದೆ. ಹೀಗಾಗಿ ಮುಂದಿನ ಬಾರಿಯಾದರೂ ತಮಗೆ ಸಚಿವ ಸ್ಥಾನ ಸಿಗಬಹುದು ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಆಶಯ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಅವರು, ವಿಧಾನಸಭೆ, ಇಲ್ಲವೇ ಪರಿಷತ್ ಸದಸ್ಯರಾಗದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. ಹೀಗೆಯೇ ಶಾಸಕರಾಗದೇ ಹಲವರು ಸಚಿವರಾಗಿದ್ದಾರೆ ಎಂದರು.
ಮುಂದಿನ ಬಾರಿ ಶಾಸಕ ಸ್ಥಾನಕ್ಕೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಹಾಗೆಂದ ಮಾತ್ರಕ್ಕೆ ಮುಂದಿನ ಬಾರಿ ಸಚಿವನಾಗುವುದಿಲ್ಲ ಎಂದು ಹೇಳಲಾರೆ. ಅದಕ್ಕೆ ಬೇರೆ ಬೇರೆ ದಾರಿಗಳಿವೆ. ಪಕ್ಷದ ನಾಯಕನಾಗಿ ಕೆಲಸ ಮಾಡಿಯೂ ಸಚಿವರಾಗಬಹುದು ಎಂದವರು ಹೇಳಿದ್ದಾರೆ.
ದಾವಣಗೆರೆ, ಜ. 28 – ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ.
ನಿನ್ನೆ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ನಿನ್ನೆಯಷ್ಟೇ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ರಾಜ್ಯದ ಸಚಿವರ ಜೊತೆ ಮಾತನಾಡಿದ್ದು, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರನ್ನೂ ಸಂಪರ್ಕಿಸುತ್ತೇನೆ. ಒಂದೆರಡು ದಿನಗಳಲ್ಲೇ ಖರೀದಿ ಪುನರಾರಂಭಕ್ಕೆ ಕ್ರಮ ವಹಿಸಲಾಗುವುದು ಎಂದರು.
ಸಂಸದ ಜಿ.ಎಂ.ಸಿದ್ದೇಶ್ವರ ಅವರು ಜಿಲ್ಲೆಗೆ ವಿಮಾನ ನಿಲ್ದಾಣ ನಿರ್ಮಿಸಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ಸಚಿವರು ಡಿಪಿಆರ್ (ವಿಸ್ತೃತ ಯೋಜನಾ ವರದಿ) ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ಆಗುವುದು ನಿಶ್ಚಿತ ಎಂದು ಸಚಿವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.
ಕುಂದುವಾಡ ಬಳಿ ದೂಡಾದಿಂದ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ ಸುಸಜ್ಜಿತ ಬಡಾವಣೆ ನಿರ್ಮಿಸಲಾಗುವುದು. ನಿವೇಶನಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದವರು ಇದೇ ವೇಳೆ ತಿಳಿಸಿದ್ದಾರೆ.
ನಾನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ ಕೆಲಸ ಮಾಡುತ್ತಿದ್ದು, ಜಿಲ್ಲೆಯ ಜನರು ಅಪಾರ ಪ್ರೀತಿ, ವಿಶ್ವಾಸ ತೋರಿಸುತ್ತಿದ್ದಾರೆ. ಹೀಗಾಗಿ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸ್ಥಾನ ನನಗೆ ಸಂತೃಪ್ತಿ ನೀಡಿದೆ. ಆದ್ದರಿಂದ ನನಗೆ ಬೇರೆ ಜಿಲ್ಲೆ ಬೇಡ. ಇದೇ ಜಿಲ್ಲೆ ಸಾಕು ಎಂದವರು ಹೇಳಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಗೆ ನೀರಾವರಿ ಯೋಜನೆ ಸೇರಿದಂತೆ ಇತರೆ ಯೋಜನೆಗಳನ್ನು ತಂದು ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.