ದಾವಣಗೆರೆ, ಫೆ.10- ಹಿಜಾಬ್ ಮತ್ತು ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಹೇಳಿಕೆಗಳನ್ನು ಹರಿಬಿಟ್ಟರೆ ಕಠಿಣ ಕಾನೂನು ಕ್ರಮ ಕೈಗೊಂಡು ರೌಡಿ ಶೀಟರ್ ಹಾಗೂ ಕಮ್ಯುನಲ್ ಗೂಂಡಾ ಶೀಟ್ಗಳನ್ನು ತೆರೆಯುವುದಾಗಿ ಎಸ್ಪಿ ಸಿ.ಬಿ. ರಿಷ್ಯಂತ್ ಎಚ್ಚರಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ನಗರ ಮತ್ತು ಗ್ರಾಮಗಳಲ್ಲಿ ಯಾರಾದರೂ ಹಿಜಾಬ್ ಮತ್ತು ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ವಾಟ್ಸ್ ಆಪ್, ಫೇಸ್ಬುಕ್, ಇನ್ ಸ್ಟ್ರಾಗ್ರಾಮ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪೋಸ್ಟರ್ ಮತ್ತು ಪ್ರಚೋದನಾಕಾರಿ ಹೇಳಿಕೆಗಳನ್ನು ಹಾಕಿದಲ್ಲಿ ಮತ್ತು ಇದಕ್ಕೆ ಸಂಬಂಧಪಟ್ಟಂತೆ ಯಾರಾದರೂ ಗುಂಪುಗಾರಿಕೆ, ಗಲಾಟೆ, ದೊಂಬಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುನ್ನೆಚ್ಚರಿಸಿದ್ದಾರೆ.
ಒಂದು ವೇಳೆ ಇದರ ಬಗ್ಗೆ ಮಾಹಿತಿ ಇದ್ದಲ್ಲಿ ಕಾನೂನು ಕೈಗೆತ್ತಿಕೊಳ್ಳದೇ ಹತ್ತಿರದ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚಿಸಿದ್ದಾರೆ.