ಬೇರು ಮಟ್ಟದಿಂದ ಕಾಂಗ್ರೆಸ್ ಬಲಿಷ್ಠಗೊಳಿಸಲು ಒತ್ತು

ನಗರದ ಕಾಂಗ್ರೆಸ್ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ದಾವಣಗೆರೆ, ಫೆ.13- ಬೇರು ಮಟ್ಟದಿಂದ ಕಾಂಗ್ರೆಸ್ ಬಲಿಷ್ಠಗೊಳಿಸಬೇಕು. ಬೂತ್ ಮಟ್ಟದಿಂದ ಹಿಡಿದು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡುವ ಅಗತ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. 

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಮೂಂಚೂಣಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಬೇಕಾದರೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈಗಿನಿಂದಲೇ ಮಾಸ್ ಬೇಸ್ ಮತ್ತು ಕೇಡರ್‌ ಬೇಸ್‌ನಲ್ಲಿ ಪಕ್ಷವನ್ನು ಸಂಘಟನೆ ಮಾಡಬೇಕಾಗಿದೆ ಎಂದರು.

ಕಾಂಗ್ರೆಸ್ ಅಧಿಕಾರವಧಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಅವುಗಳನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಾಗಿದೆ. ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆಯನ್ನು ಜನರಿಗೆ ಮನವರಿಕೆ ಮಾಡಿಕೊಟ್ಟಾಗ ಮಾತ್ರ ಪಕ್ಷ ಸಂಘಟನೆ ಬಲಗೊಳ್ಳಲು ಸಾಧ್ಯ ಎಂದು ಹೇಳಿದರು.

ಕಾಂಗ್ರೆಸ್ ಬಗ್ಗೆ ಒಲವು ಇರುವವರು, ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡಿರುವ ಕಾರ್ಯಕರ್ತರನ್ನು ನೋಂದಣಿ ಮಾಡಿಸುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬಬೇಕಾಗಿದೆ.

ಡಿಜಿಟಲ್ ನೋಂದಣಿ ಕಾರ್ಯ ದಾಖಲೆ ಮಟ್ಟದಲ್ಲಿ ಆಗಬೇಕಾಗಿದೆ.ಇದಕ್ಕಾಗಿ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಪ್ರೋತ್ಸಾಹ ನೀಡಲು ಆದ್ಯತೆ ನೀಡಬೇಕು. ಸಾಮೂಹಿಕ ನಾಯಕತ್ವದಡಿಯಲ್ಲಿ ಶ್ರಮಿಸಿದಾಗ ಮಾತ್ರ ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು.  ಹೊನ್ನಾಳಿ ಮಾಜಿ ಶಾಸಕ ಡಿ.ಜಿ. ಶಾಂತನಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮುಖಂಡರಾದ ಅಬ್ದುಲ್ ಜಬ್ಬಾರ್, ಕೆ.ಜಿ. ಶಿವಕುಮಾರ್, ಎ. ನಾಗರಾಜ್, ಅನಿತಾಬಾಯಿ ಮಾಲತೇಶರಾವ್ ಜಾಧವ್, ಕೆ.ಪಿ. ಪಾಲಯ್ಯ, ಹೊದಿಗೆರೆ ರಮೇಶ್, ನಂದಿಗಾವಿ ಶ್ರೀನಿವಾಸ್, ಅಬಿದಾಲಿ, ಸವಿತಾ ಗಣೇಶ್ ಹುಲ್ಮನಿ, ಸುಧಾ ಮಂಜುನಾಥ್ ಇಟ್ಟಿಗುಡಿ, ಗಣೇಶ್ ಹುಲ್ಮನಿ, ಜಿಗಳಿ ಆನಂದಪ್ಪ, ಮಂಜುನಾಥ್ ಪಾಟೀಲ್, ನಾಗೇಂದ್ರಪ್ಪ, ಕವಿತಾ ಚಂದ್ರಶೇಖರ್, ನಿಖಿಲ್ ಕೊಂಡಜ್ಜಿ, ಡಿ.ಸಿ. ರಾಕೇಶ್, ಕೆ.ಎಲ್. ಹರೀಶ್ ಬಸಾಪುರ, ರಘು ದೊಡ್ಡಮನಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!