ಹಕ್ಕಿಜ್ವರ : ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿ ಬೀಳಗಿ ಸೂಚನೆ

ಹಕ್ಕಿಜ್ವರ : ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿ ಬೀಳಗಿ ಸೂಚನೆ - Janathavaniದಾವಣಗೆರೆ, ಜ. 7-ನೆರೆಯ ರಾಜ್ಯ ಕೇರಳದಲ್ಲಿ ಹಕ್ಕಿಜ್ವರ ಪ್ರಕರಣಗಳು ಕಂಡುಬಂದಿದ್ದು, ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಧಿಕಾರಿಗಳು ತೀವ್ರ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದಿವೆ.  ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯಲ್ಲಿಯೂ ಕೆಲವೆಡೆ ಪ್ರಕರಣ ಕಂಡುಬಂದಿತ್ತು.  ಸದ್ಯ ಜಿಲ್ಲೆಯಲ್ಲಿ ಅಂತಹ ಯಾವುದೇ ಪ್ರಕರಣ ವರದಿಯಾಗಿಲ್ಲ. ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೋಳಿಫಾರಂ ಗಳಲ್ಲಿ ಪರಿಶೀಲನೆ ನಡೆಸಬೇಕು ಎಂದರು.

ಕೋಳಿ ಫಾರಂ ಪ್ರದೇಶದಲ್ಲಿ ಸೋಂಕು ನಿವಾರಕಗಳನ್ನು ಬಳಸಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳು ಕೋಳಿ ಫಾರಂಗಳ ಮಾಲೀಕರಿಗೆ ತಾಕೀತು ಮಾಡಬೇಕು.  ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ನಿಯಮಿತವಾಗಿ ಕೋಳಿ ಫಾರಂಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲೆಯ ಯಾವುದೇ ಅರಣ್ಯ ಪ್ರದೇಶ, ಕೆರೆ ಕಟ್ಟೆ ನೀರು ನಿಲ್ಲುವ ಪ್ರದೇಶಗಳಲ್ಲಿ ವಲಸೆ ಹಕ್ಕಿಗಳು ಅಥವಾ ಯಾವುದೇ ಹಕ್ಕಿಗಳ ಅಸಹಜ ಸಾವು ಕಂಡುಬಂದಲ್ಲಿ, ಮಾಹಿತಿ ಪಡೆದು ಕೂಡಲೆ ತ್ವರಿತವಾಗಿ ಸ್ಪಂದಿಸುವ ಕಾರ್ಯವಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಇತರರು ಉಪಸ್ಥಿತರಿದ್ದರು.

error: Content is protected !!