ಒತ್ತಡ ಮುಕ್ತರಾಗಿ ಪುನಶ್ಚೇತನಗೊಳ್ಳಲು ಕ್ರೀಡಾಕೂಟ ಸಹಕಾರಿ

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ, ಫೆ.5- ನಿತ್ಯದ ಕರ್ತವ್ಯದ ಒತ್ತಡದಿಂದ ಮುಕ್ತರಾಗಿ, ತಮ್ಮನ್ನು ತಾವು ಪುನಶ್ಚೇತನ ಗೊಳಿಸಿಕೊಳ್ಳಲು ಕ್ರೀಡಾಕೂಟ ಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ, ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ಕ್ರೀಡಾಂಗಣದಲ್ಲಿ  ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸಿ ಖುಷಿಯಿಂದ ಆಟವಾಡುವುದು ಮುಖ್ಯ. ಎಲ್ಲರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಹುರು ಪಿನಿಂದ ಪಾಲ್ಗೊಂಡು ತಮ್ಮ ಇಲಾಖೆಗಳಿಗೆ ಹೆಸರು ತರುವಂತೆ ಹಾರೈಸಿದರು.

ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ಕ್ರೀಡೆ ಎಂದರೇನು? ಎಂದು ಪ್ರಶ್ನಿಸುವಂತಹ  ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಓದು, ಕಂಪ್ಯೂಟರ್, ಮೊಬೈಲ್‌ಗಳಲ್ಲಿ ಲೀನವಾ ಗುವ ಮಕ್ಕಳಿಗೆ, ಪೋಷಕರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪ್ರೇರಣೆಯಾಗಬೇಕು ಎಂದು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಮೇಯರ್  ಬಿ.ಜಿ.ಅಜಯಕುಮಾರ್ ಮಾತನಾಡಿ, ಕಾರ್ಯಾಂಗ ಉತ್ತಮವಾಗಿದ್ದರೆ, ಆಡಳಿತ ಸುಗಮವಾಗಿ ನಡೆಯುತ್ತದೆ. ಕಾರ್ಯಾಂಗವನ್ನು ಪ್ರತಿನಿಧಿಸುವ ಸರ್ಕಾರಿ ನೌಕರರು ಚಟುವಟಿಕೆಯಿಂದ ಇದ್ದರೆ ಒಂದೆರಡು ತಾಸು ಹೆಚ್ಚು ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅವಶ್ಯಕ. ಸಾವಿರಕ್ಕೂ ಮೀರಿ ನೌಕರರು ಇಂದಿನ ಕ್ರೀಡೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿರುವುದು ಉತ್ತಮ ಬೆಳವಣಿಗೆ ಎಂದರು.

ತಹಶೀಲ್ದಾರ್ ಬಿ.ಎನ್.ಗಿರೀಶ್ ಮಾತನಾಡಿ, ಕ್ರೀಡಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ನೌಕರರು, ಸಿಬ್ಬಂದಿಗಳು ಇಲ್ಲಿ ಪಾಲ್ಗೊಂಡಿರುವುದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೊರೊನಾ ಸಂದರ್ಭದಲ್ಲೂ ಒತ್ತಡದಿಂದ ಕರ್ತವ್ಯ ನಿರ್ವಹಿಸಿದ್ದ ಸರ್ಕಾರಿ ನೌಕರರಿಗೆ ಈ ಕ್ರೀಡಾಕೂಟ ಶಕ್ತಿವರ್ಧಕವಿದ್ದಂತೆ ಎಂದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾದ ಸಾಕಮ್ಮ ಗಂಗಾಧರನಾಯ್ಕ ಹಾಗೂ ಇತರರು ಉಪಸ್ಥಿತರಿದ್ದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಸ್ವಾಗತಿಸಿದರು. 

ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಕೆ.ಆರ್. ಮಲ್ಲಿಕಾರ್ಜುನಯ್ಯ, ಕ್ರೀಡಾ ಕಾರ್ಯದರ್ಶಿ ಗುರುಮೂರ್ತಿ ಕಾರ್ಯಕ್ರಮ ನಿರೂಪಿಸಿದರು.  ಸಾಂಸ್ಕೃತಿಕ ಕಾರ್ಯದರ್ಶಿ ಟಿ. ಪ್ರಕಾಶ್ ಪ್ರಾರ್ಥಿಸಿದರು. ಖಜಾಂಚಿ ಎಸ್.ಕಲ್ಲೇಶಪ್ಪ ವಂದಿಸಿದರು.

error: Content is protected !!