ಡಿಸಿ ಪವನ ಮಾಲಪಾಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ
ಬಳ್ಳಾರಿ, ಫೆ.15 – ಹೂವಿನಹಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರಣಿಕೋತ್ಸವಕ್ಕೆ ಮೈಲಾರ ಗ್ರಾಮಸ್ಥರನ್ನು ಹೊರತುಪಡಿಸಿ ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಇದೇ ಫೆ.19ರಿಂದ ಮಾ.2ರವರೆಗೆ ನಡೆಯಲಿರುವ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಮತ್ತು ಕಾರಣಿಕೋತ್ಸವವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿಕೊಂಡು ಆಚರಿಸಲು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಸೂಚಿಸಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕಾರಣಿಕೋತ್ಸವದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕಾರಣಿಕೋತ್ಸವಕ್ಕೆ ಫೆ.19ರಿಂದ ಮಾ.2ರವರೆಗೆ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಹಾಗೂ ಬ್ಯಾರಿಕೆಡ್ ಸೇರಿದಂತೆ ಇನ್ನಿತರೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮಾಲಪಾಟಿ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಜನರು ಎತ್ತಿನ ಗಾಡಿಗಳು, ಟ್ರ್ಯಾಕ್ಟರ್, ವಾಹನಗಳ ಮೂಲಕ ಮೈಲಾರ ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಹಡಗಲಿ, ಹರಪನಳ್ಳಿ ಹಾಗೂ ಹಾವೇರಿ, ದಾವಣಗೆರೆ, ಗದಗ ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಮಾಲಪಾಟಿ ಸೂಚಿಸಿದರು.
ಮೈಲಾರ ಜಾತ್ರೆಗೆ ಸಂಬಂಧಿಸಿದಂತೆ ಈ ಮುಂಚೆ ಪ್ರತಿ ವರ್ಷ ಯಾವ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿತ್ತೋ ಅದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ ಮಾಲಪಾಟಿ ಅವರು, ಮೈಲಾರ ಶ್ರೀ ಮೈಲಾರಲಿಂಗ ಸ್ವಾಮಿ ದೇವಸ್ಥಾನದ ರೂಢಿ ಸಂಪ್ರದಾಯದ ಪೂಜಾ ಕಾರ್ಯ,ಧಾರ್ಮಿಕ ಕಾರ್ಯಗಳಿಗೆ ಯಾವುದೇ ರೀತಿಯ ಚ್ಯುತಿ ಬಾರದಂತೆ ನಿರ್ವಹಿಸಲು ಸೂಚನೆ ನೀಡಿದರು.
ಧ್ವನಿವರ್ಧಕ ವ್ಯವಸ್ಥೆ ಮಾಡಿ : ಕಾರಣಿಕ ಮೈದಾನದಲ್ಲಿ ಕಾರಣಿಕ ನುಡಿ ಸ್ಪಷ್ಟವಾಗಿ ಕೇಳುವ ಹಾಗೆ ಧ್ವನಿವರ್ಧಕ ವ್ಯವಸ್ಥೆ ಮತ್ತು ಕಾರಣಿಕ ನುಡಿಯನ್ನು ಸೆರೆ ಹಿಡಿಯಲು ಅತ್ಯಾಧುನಿಕ ಸಲಕರಣೆಗಳನ್ನು ಬಳಸಿಕೊಂಡು ರಿಕಾರ್ಡ್ ಮಾಡಿಕೊಳ್ಳುವ ವ್ಯವಸ್ಥೆ ಹಾಗೂ ಮಾಧ್ಯಮಗಳ ಮೂಲಕ ಬಿಡುಗಡೆ ಮಾಡುವ ವ್ಯವಸ್ಥೆ ಮಾಡುವಂತೆಯೂ ಡಿಸಿ ಮಾಲಪಾಟಿ ಅವರು ಸೂಚಿಸಿದರು.
ಕುರವತ್ತಿಯ ಮಲ್ಲಿಕಾರ್ಜುನಸ್ವಾಮಿ ಮತ್ತು ಬಸವೇಶ್ವರ ಸ್ವಾಮಿ ರಥೋತ್ಸವ ವಿಷಯದಲ್ಲಿ ಇದೇ ನಿಯಮಗಳನ್ನು ಅನುಸರಿಸಲು ಡಿಸಿ ಮಾಲಪಾಟಿ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಎಡಿಸಿ ಪಿ.ಎಸ್.ಮಂಜುನಾಥ ಅವರು ಮಾತನಾಡಿದರು.
ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ, ಹಡಗಲಿ ತಹಸೀಲ್ದಾರ್ ವಿಶ್ವಜಿತ್ ಮೆಹತಾ, ತಾಪಂ ಇಒ ಸೋಮಶೇಖರ, ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.