9ನೇ ತರಗತಿವರೆಗೆ ಎಲ್ಲರೂ ಪಾಸ್‌

ಈ ವರ್ಷವೂ ಪರೀಕ್ಷೆ ರಹಿತವಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು, ಏ. 20 – ಒಂದರಿಂದ ಒಂಭತ್ತನೆ ತರಗತಿವರೆಗಿನ ಪರೀಕ್ಷೆಗಳನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಎಲ್ಲಾ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಿದೆ. 

ನಿಗದಿಯಂತೆ ಹತ್ತನೇ ತರಗತಿ ಪರೀಕ್ಷೆ ಜೂನ್ 21 ರಿಂದ ಪ್ರಾರಂಭವಾಗಲಿದೆ ಎಂದು ರಾಜ್ಯ ಶಿಕ್ಷಣ ಇಲಾಖೆ ಇಂದು ಸುತ್ತೋಲೆ ಆದೇಶ ಹೊರಡಿಸಿದೆ. 

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷೆಗಳಿಲ್ಲದೆ, ಈ ತರಗತಿಯ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗಿದೆ. 

ಈ ಸಂಬಂಧ ಸವಿಸ್ತಾರವಾದ ವಿವರಣೆ ನೀಡಿರುವ ಇಲಾಖೆ ರಜೆ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪಠ್ಯಗಳನ್ನು ಅಧ್ಯಯನ ಮಾಡುವುದರಲ್ಲಿ ಮಗ್ನರಾಗಬೇಕೆಂದು ತಿಳಿಸಿದೆ. 

ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಭತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. 

1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು/ ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್‍ಲೈನ್ ಮೂಲಕ ತರಗತಿ ನಿರ್ವಹಿಸಿದ್ದಲ್ಲಿ ಆ ಸಂದರ್ಭದಲ್ಲಿ ಅವಲೋಕಿಸಿದ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಬೇಕು ಎಂದು ತಿಳಿಸಲಾಗಿದೆ.

ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ, ಈ ಎಲ್ಲ ಪ್ರಕ್ರಿಯೆಗಳನ್ನು ಏಪ್ರಿಲ್ 30ರೊಳಗೆ ನಿರ್ವಹಿಸಿ ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಒಂದರಿಂದ ಐದನೇ ತರಗತಿವರೆಗೆ ಶಾಲಾ ಹಂತದಲ್ಲಿ ಮಕ್ಕಳ ಪ್ರಗತಿ ವಿಶ್ಲೇಷಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು. 

ಹಾಗೆಯೇ ಈ ತರಗತಿಗಳ ವಿದ್ಯಾರ್ಥಿಗಳು ಶಾಲೆಗೆ ಭೌತಿಕವಾಗಿ ಹಾಜರಾಗಲು ಕರೆಯಬಾರದು. ಮಕ್ಕಳಿಗೆ ಪ್ರತ್ಯೇಕ ಆನ್‍ಲೈನ್ ಇಲ್ಲವೇ ಆಫ್‍ಲೈನ್ ಮೂಲಕವೂ ಸಹ ಮೌಲ್ಯಾಂಕನ ಮಾಡಬಾರದು. ಮೌಲ್ಯಾಂಕನಕ್ಕಾಗಿ ಈ ಮಕ್ಕಳನ್ನು ಶಾಲೆಗಳಿಗೆ ಹಾಜರಾಗುವಂತೆ ಸೂಚಿಸಬಾರದು ಎಂದು ತಿಳಿಸಲಾಗಿದೆ.

6 ರಿಂದ 9ನೇ ತರಗತಿಗಳ ಮಕ್ಕಳು ಭೌತಿಕವಾಗಿ ತರಗತಿಗಳಿಗೆ ಹಾಜರಾಗುತಿದ್ದರು. ಹಾಗೆಯೇ ದೂರದರ್ಶನ ಸೇರಿ ಹಲವು ಮಾರ್ಗಗಳಿಂದ ಕಲಿಕೆಯಲ್ಲಿ ತೊಡಗಿದ್ದರು. ಹೀಗಾಗಿ ಮಕ್ಕಳ ಮೌಲ್ಯಮಾಪನ ಹಾಗೂ ಸಂಕಲನಾತ್ಮಕ ಮೌಲ್ಯಮಾಪನವನ್ನು ನಿರ್ವಹಿಸಿದ ದಾಖಲೆಗಳನ್ನಾಧರಿಸಿ ಪಡೆದ ಅಂಕಗಳನ್ನು 100ಕ್ಕೆ ವೃದ್ಧಿಸಿ ಶ್ರೇಣಿ ನಮೂದಿಸಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುತ್ತದೆ.

ಈ ಬಾರಿಯ ಮೌಲ್ಯಾಂಕನ ಉತ್ತೀರ್ಣತೆಗೆ ಸಂಬಂಧಿಸಿದ್ದಲ್ಲ. ಮಕ್ಕಳ ಕಲಿಕೆಯ ಪ್ರಗತಿ ಹಾಗೂ ಕೊರತೆಯನ್ನು ತಿಳಿದು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮವನ್ನು ನಡೆಸಿ ಈ ಕೊರತೆಯನ್ನು ತುಂಬಲು ಕ್ರಮ ವಹಿಸಲು ಶಾಲಾ ಯೋಜನೆಯನ್ನು ತಯಾರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!