ಜಿಲ್ಲಾ ಗಡಿಯಲ್ಲಿ ಚೆಕ್ ಪೋಸ್ಟ್

ದಾವಣಗೆರೆ, ಏ.21- ಜಿಲ್ಲೆಗೆ ಹೊರ ಜಿಲ್ಲೆಗಳಿಂದ ವಾಹನಗಳು ಬರುವ ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿ.ಎ. ಬಸವರಾಜ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬುಧವಾರ ಕೋವಿಡ್ ಪರಿಸ್ಥಿತಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ತಡೆಗೆ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಬೇಕಿದ್ದು, ಈ ದಿಸೆಯಲ್ಲಿ ಜಿಲ್ಲೆಯ ಗಡಿ ಪ್ರವೇಶಿಸುವ ಮಾರ್ಗಗಳಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಹಾಗೂ ಹೈವೇ ರಸ್ತೆಯಿಂದ ನಗರಕ್ಕೆ ಪ್ರವೇಶಿಸುವ ವಾಹನಗಳ ಮೇಲೂ ನಿಗಾ ಇಡುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಗೆ ಸೂಚಿಸಿದರು.

ಜಾತ್ರೆ, ರಥೋತ್ಸವಗಳನ್ನು ರದ್ದುಗೊಳಿಸಿ, ದೇವಸ್ಥಾನ, ಮಸೀದಿ, ಚರ್ಚುಗಳಲ್ಲಿ ಜನಸಂದಣಿಯನ್ನು ತಡೆಗಟ್ಟಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು  ಬೆಡ್‌ಗಳು ಮೀಸಲಿರಬೇಕು. ಯಾವುದೇ ಪ್ರಭಾವಕ್ಕೆ ಒಳಗಾಗಿ ಆಸ್ಪತ್ರೆಗಳಿಗೆ  ವಿನಾಯಿತಿ ನೀಡಬಾರದು. ಒಂದು ವೇಳೆ ಆಸ್ಪತ್ರೆಗಳು ಸಹಕರಿಸದಿದ್ದರೆ ಮಾನ್ಯತೆ ರದ್ದುಪಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ 9 ಸರ್ಕಾರಿ ಆಸ್ಪತ್ರೆಗಳಲ್ಲಿ 1450 ಬೆಡ್ ಹಾಗೂ 11 ಖಾಸಗಿ ಆಸ್ಪತ್ರೆಗಳಲ್ಲಿ 2273 ಬೆಡ್ ಸೇರಿದಂತೆ ಒಟ್ಟು 3723 ಬೆಡ್‍ಗಳು ಜಿಲ್ಲೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆಗೆ ಮೀಸಲಿದ್ದು, ಈ ಪೈಕಿ ಸದ್ಯ 293 ಬೆಡ್‍ಗಳಲ್ಲಿ ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.  ಜಿಲ್ಲೆಯಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ 6000 ಲೀ. ಸಾಮರ್ಥ್ಯದ ಆಕ್ಸಿಜನ್ ಘಟಕ ಲಭ್ಯವಿದ್ದು, ಇದರ ಜೊತೆಗೆ ಖಾಸಗಿಯಲ್ಲಿಯೂ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.  ಹೀಗಾಗಿ ಜಿಲ್ಲೆಯಲ್ಲಿ ಆಕ್ಸಿಜನ್‍ನ ಯಾವುದೇ ತೊಂದರೆ ಇಲ್ಲ ಎಂದರು.

ಜಿಲ್ಲೆಯಲ್ಲಿ ತಾವೇ ಖುದ್ದಾಗಿ ಜನನಿಬಿಡ ಸ್ಥಳಗಳಿಗೆ ಭೇಟಿ ನೀಡಿ, ಮಾಸ್ಕ್ ಅಭಿಯಾನ ನಡೆಸುತ್ತಿದ್ದು, ಜನರು ಏನೂ ಆಗಿಯೇ ಇಲ್ಲವೆಂಬಂತೆ ನಿರ್ಭೀತಿಯಿಂದ ಮಾಸ್ಕ್ ಇಲ್ಲದೇ ಸಾಮಾಜಿಕ ಅಂತರ ಮರೆತು ವರ್ತಿಸುತ್ತಿರುವುದು ಕಂಡುಬಂದಿದೆ.  ನಿಯಮ ಉಲ್ಲಂಘಿಸುವ ಅಂಗಡಿಗಳಿಗೆ ಹಾಗೂ ಕಲ್ಯಾಣ ಮಂಟಪಗಳಿಗೆ ದಂಡ ವಿಧಿಸಲಾಗುತ್ತಿದೆ.  ಮುಂದಿನ ದಿನಗಳಲ್ಲಿ ಇನ್ನೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಮದುವೆಗಳನ್ನು ಮುಂದೂಡಲು ಮನವಿ: ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟೂ ಮದುವೆಗಳನ್ನು ಮುಂದೂಡುವಂತೆ ಸಚಿವ ಭೈರತಿ ಸಾರ್ವಜನಿಕರಿಗೆ ಮನವಿ ಮಾಡಿದರು. ಮದುವೆಗೆ ಜನರನ್ನು ಕರೆಯುತ್ತೀರಿ, ಜನರೂ ಬರುತ್ತಾರೆ. ಅಲ್ಲಿ ಸೋಂಕು ಹರಡಿದರೆ ನಿಮಗೇ ಇರಿಸು-ಮುರಿಸು ಉಂಟಾಗುತ್ತದೆ ಎಂದರು. ಮನೆಯಿಂದ ಹೊರ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳು ದಂಡ ವಿಧಿಸುತ್ತಾರೆ. ಆದಷ್ಟೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಕೋರಿದರು.

ಬೆಂಗಳೂರಿನಲ್ಲಿ ಆಟೋಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು, ದಾವಣಗೆರೆಯಲ್ಲಿಯೂ ಅದೇ ರೀತಿ ಕ್ರಮ ವಹಿಸುವಂತೆ ಸಚಿವರು ಸೂಚಿಸಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರುಗಳಾದ ಎಸ್.ಎ. ರವೀಂದ್ರನಾಥ್, ಎಸ್.ವಿ. ರಾಮಚಂದ್ರ, ಜಿ.ಪಂ. ಅಧ್ಯಕ್ಷೆ ಶಾಂತಕುಮಾರಿ, ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಎಸ್ಪಿ ಹನುಮಂತರಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ,  ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ, ವಿವಿಧ ಇಲಾಖೆಗಳ ಅಧಿಕಾರಿಗಳು,  ತಹಸೀಲ್ದಾರರು ಭಾಗವಹಿಸಿದ್ದರು.

error: Content is protected !!