ಚಿಕಿತ್ಸಾ ವಿಧಾನ, ಔಷಧಿ ಲಭ್ಯವಿಲ್ಲ – ಜಿಲ್ಲಾಧಿಕಾರಿ
2ನೇ ಅಲೆ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 48 ಜನರು ಮೃತಪಟ್ಟಿದ್ದು, ಐಎಲ್ಐ ಪ್ರಕರಣಗಳ ಒಟ್ಟು 78 ಸಾವುಗಳು ಸಂಭವಿಸಿವೆ.
– ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿ
ದಾವಣಗೆರೆ, ಮೇ 17- ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್ನ 6 ಪ್ರಕರಣಗಳು ವರದಿಯಾಗಿವೆ. ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ 1, ಎಸ್ಎಸ್ ಆಸ್ಪತ್ರೆಯಲ್ಲಿ 1 ಹಾಗೂ ಬಾಪೂಜಿ ಆಸ್ಪತ್ರೆಯಲ್ಲಿ 4 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಬ್ಲ್ಯಾಕ್ ಫಂಗಸ್ ಪ್ರಕರಣಗಳಿಗೆ ಸೂಕ್ತ ಚಿಕಿತ್ಸಾ ವಿಧಾನ ಹಾಗೂ ಔಷಧಿ ಸದ್ಯ ಜಿಲ್ಲೆಯಲ್ಲಿ ಲಭ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿಗಳು ಮಾತನಾಡಿದರು. ಬ್ಲ್ಯಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ ಶಿವಮೊಗ್ಗ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು ಹಾಗೂ ಮೈಸೂರಿನಲ್ಲಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಗುರುವಾರದಿಂದ ಪ್ರಾರಂಭವಾಗಲಿದ್ದು, ಅದರನ್ವಯ ರೋಗಿಗಳನ್ನು ಸಮೀಪದ ಜಿಲ್ಲೆಗೆ ಸ್ಥಳಾಂತರಿಸಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.
ರಾಜ್ಯದ ಸರಾಸರಿಗೆ ಹೋಲಿಸಿದಾಗ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇದೆ. ಆದರೂ ಜಿಲ್ಲೆಯಲ್ಲಿ ಇನ್ನಷ್ಟು ಎಚ್ಚರಿಕೆ ವಹಿಸಲಾಗುತ್ತಿದೆ. 2ನೇ ಅಲೆ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 48 ಜನರು ಮೃತಪಟ್ಟಿದ್ದು, ಐಎಲ್ಐ ಪ್ರಕರಣಗಳ ಒಟ್ಟು 78 ಸಾವು ಸಂಭವಿಸಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ಅನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ರೆಮ್ಡೆಸಿವರ್ ಔಷಧಿ ಸರ್ಕಾರಿ ಆಸ್ಪತ್ರೆಗಳಿಗಾಗಿ ಸಮರ್ಪಕವಾಗಿ ಜಿಲ್ಲೆಗೆ ಪೂರೈಕೆಯಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಇದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 5.32 ಲಕ್ಷ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿತ್ಯ ಸರಾಸರಿ 2 ಸಾವಿರ ಟೆಸ್ಟ್ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕೋವಿಡ್ ಕೇರ್ ಸೆಂಟರ್ಗಳಿಗೆ ವಿವಿಧ ಸ್ವಾಮೀಜಿಗಳು ಕೂಡ ಸಹಕಾರ ನೀಡುತ್ತಿದ್ದು, ಈಗಾಗಲೇ ತರಳಬಾಳು ಜಗದ್ಗುರುಗಳು ನಗರದಲ್ಲಿ ಹಾಸ್ಟೆಲ್ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ ಹಳೆ ದಾವಣಗೆರೆ ಭಾಗದಲ್ಲಿಯೂ ಕೂಡ ತಾಜ್ ಪ್ಯಾಲೇಸ್, ಇಲ್ಲಿನ ನರ್ಸಿಂಗ್ ಕಾಲೇಜು ಹಾಗೂ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿಸಲು ಸಹಕಾರ ನೀಡುತ್ತಿದ್ದಾರೆ. ಜಿಲ್ಲೆಗೆ ಹೆಚ್ಚುವರಿಯಾಗಿ 2 ಕೆಎಲ್ ಆಕ್ಸಿಜನ್ ಹಂಚಿಕೆಯಾಗಿದೆ. ಪಾಲಿಕೆಯಿಂದ 60 ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಸದ್ಯ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಸೋಂಕಿತರಿಗೆ ಸೂಕ್ತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಿಕೊಂಡು, ಸಂಪನ್ಮೂಲಗಳ ಸದ್ಬಳಕೆಗೆ ಪೂರಕ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರ್ಗಳನ್ನು ಪ್ರಾರಂಭಿಸಬೇಕು, ಇದರ ಜೊತೆಗೆ ಆಸ್ಪತ್ರೆಗಳನ್ನೂ ಬಲಪಡಿಸಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಅಶ್ವತ್ಥ್ ನಾರಾಯಣ, ಗೋವಿಂದ ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಿಜಯ್ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಡಿಯುಡಿಸಿ ಯೋಜನಾ ನಿರ್ದೇಶಕಿ ನಜ್ಮಾ, ಡಿಹೆಚ್ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್ ಉಪಸ್ಥಿತರಿದ್ದರು.