ಜಗಳೂರು, ಜೂ. 8 – ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಆಮ್ಲಜನಕ ತಯಾರಿಕ ಘಟಕ ಸ್ಥಾಪನೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಕ್ಟ್ ಗ್ರ್ಯಾಂಟ್ಸ್ ಮತ್ತು ಶಕ್ತಿ ಕ್ಲೀನ್ ಮ್ಯಾಕ್ಸ್ ವಿಂಡ್ ಮತ್ತು ಸೋಲಾರ್ ಕಂಪನಿಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ನಿರ್ಮಿಸಿದ ಆಕ್ಸಿಜನ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆ ಯಿಂದಾಗಿ ತಾಲ್ಲೂಕಿನ ಕೊರೊನಾ ರೋಗಿಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ. ಹಿಂದುಳಿದ ತಾಲ್ಲೂಕಿಗೆ ಖಾಸಗಿ ವಿಂಡ್ ಮತ್ತು ಸೋಲಾರ್ ಕಂಪನಿಗಳು 80 ಲಕ್ಷ ರೂ ವೆಚ್ಚದ ಕೊಡುಗೆ ನೀಡಿದ್ದಾರೆ. ಅವರಿಗೆ ಸರ್ಕಾರದ ಪರವಾಗಿ ಅಭಿನಂದಿಸುತ್ತೇನೆ ಎಂದರು.
ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ಎಲ್ಲಾ ರೋಗಿಗಳಿಗೆ ಶಾಸಕ ಎಸ್.ವಿ ರಾಮಚಂದ್ರಪ್ಪ ಅವರು ಪ್ರತಿ ದಿನ ಸುಮಾರು 60 ಸಾವಿರ ರೂ.ಗಳ ವೆಚ್ಚದಲ್ಲಿ ಪೌಷ್ಟಿಕ ಆಹಾರ ನೀಡುತ್ತಿರುವುದು ಶ್ಲಾಘನೀಯ ಎಂದು ಸಚಿವರು ತಿಳಿಸಿದರು.
ಸಂಸದ ಜಿ.ಎಂ ಸಿದ್ದೇಶ್ವರ ಮಾತನಾಡಿ, ಶಾಸಕ ಎಸ್.ವಿ.ರಾಮಚಂದ್ರ ಕೊರೊನಾ ಗುಣಮುಖರಾಗಿ ಬಂದ 10 ದಿನಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಶ್ರಮಿಸಿದ್ದಾರೆ. ದೊಡ್ಡ ಕೆಲಸವನ್ನು ಹೇಳದೇ ಮಾಡಿ ತೋರಿಸಿದ್ದಾರೆ. ಇದು ಅವರಿಗಿರುವ ಜನಪರ ಕಾಳಜಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಮಹರ್ಷಿ ವಾಲ್ಮೀಕಿ ಪ.ಪಂ. ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ಎಸ್.ವಿ ರಾಮಚಂದ್ರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿದ್ದರಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ. ಅಧಿಕಾರಿಗಳು, ಆಶಾ, ಅಂಗನವಾಡಿ ಶಿಕ್ಷಕಿಯರು ಉತ್ತಮ ಕೆಲಸ ಮಾಡಿದ್ದಾರೆ ಎಂದರು.
ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ. ಅಗತ್ಯ ಬಿದ್ದರೆ ಇನ್ನೂ 50 ಬೆಡ್ ಗಳನ್ನು ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು.ಈಗಾಗಲೇ ಆಸ್ಪತ್ರೆಗೆ 3 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಒದಗಿಸಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ,
ಡಿ.ವೈ.ಎಸ್.ಪಿ. ನರಸಿಂಹ ವಿ. ತಾಮ್ರಧ್ವಜ. ಉಪವಿಭಾ ಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಗಿರೀಶ್ ಬಾಬು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಲ್ಲನಾಯ್ಕ್, ವೃತ್ತ ನಿರೀಕ್ಷಕ ಮಂಜುನಾಥ ಪಂಡಿತ್, ತಾಲ್ಲೂಕು ವೈದ್ಯಾಧಿಕಾರಿ ಡಾ. ನಾಗರಾಜ್, ಡಾ.ಮಲ್ಲಪ್ಪ. ಪಪಂ ಅಧ್ಯಕ್ಷ ಆರ್.ತಿಪ್ಪೇಸ್ವಾಮಿ, ಕ್ಲೀನ್ ಮ್ಯಾಕ್ಸ್ ವಿಂಡ್ ಸೋಲಾರ್ ಕಂಪನಿಯ ಪ್ರಧಾನ ವ್ಯವಸ್ಥಾಪಕ ಎಂ.ಎಸ್. ಸುಭಾಷ್ ಬಾಬು ಸೇರಿದಂತೆ, ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.