21ರವರೆಗೆ ಜಿಲ್ಲೆ ಲಾಕ್‌

ಪಾಸಿಟಿವ್ ದರ ಹೆಚ್ಚಳ: ದಾವಣಗೆರೆ ಸೇರಿ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

ಬೆಂಗಳೂರು, ಜೂ. 10 – ಕೊರೊನಾ ಪಾಸಿಟಿವ್ ದರ ಹೆಚ್ಚಾಗಿರುವ ಕಾರಣ, ದಾವಣಗೆರೆ ಸೇರಿದಂತೆ 11 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಲಾಕ್‌ಡೌನ್‌ ಮುಂದುವರೆಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೋಂಕು ತಡೆಗಟ್ಟಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರೊಟ್ಟಿಗೆ ಸಮಾಲೋಚನೆ ನಡೆಸಿ, ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದಿದ್ದಾರೆ.

ಗುರುವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾಗೆ ಸಂಬಂಧಪಟ್ಟ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಟ್ಟಿಗೆ ಚರ್ಚೆ ನಡೆಸಿದ ನಂತರ ಈ ತೀರ್ಮಾನ ಕೈಗೊಂಡಿದ್ದಾರೆ. ಇದರಿಂದಾಗಿ 11 ಜಿಲ್ಲೆಗಳಲ್ಲಿ ಜೂ.21ರವರೆಗೆ ಯಥಾಸ್ಥಿತಿ ಮುಂದುವರೆಯಲಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ಸೋಂಕಿನ ಸರಪಳಿ ಕಡಿತಗೊಳ್ಳದ 11 ಜಿಲ್ಲೆಗಳಲ್ಲಿ ಲಾಕ್‍ಡೌನ್ ಯಥಾಸ್ಥಿತಿ ಮುಂದುವರೆಯುತ್ತದೆ.

ರಾಜ್ಯದಲ್ಲಿ ಪಾಸಿಟಿವ್ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಲಾಕ್‌ ಸಡಿಲಿಕೆಯಾದರೂ, ಯಾವುದೇ ರೀತಿಯ ಸಾರಿಗೆ ಸಂಚಾರ ಇನ್ನು ಒಂದು ವಾರ ಕಾಲ ಇರುವುದಿಲ್ಲ ಎಂದವರು ಸ್ಪಷ್ಟಪಡಿಸಿದರು. 

ಮುಂದಿನ ದಿನಗಳಲ್ಲಿ ಸೋಂಕಿನ ಸರಪಳಿ ಕಡಿಮೆಯಾದರೆ, ಸಡಿಲಿಕೆಯನ್ನು ಮತ್ತಷ್ಟು ಸಡಿಲಿಸಲಾಗುವುದು. ವಾರಾಂತ್ಯ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ರಾತ್ರಿ ಕರ್ಫ್ಯೂ ಮುಂದುವರೆಯಲಿದೆ. 

ಲಾಕ್‌ ಸಡಿಲಿಕೆಯಾಗದ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ಅದರಂತೆ, ಜೂ. 14ರಿಂದ ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. 

ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. 

ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆಗೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ನಿಡಲಾಗಿದೆ. 

ಪಾರ್ಕ್‌ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. 

error: Content is protected !!