ದಾವಣಗೆರೆ ಜೂ.23- ಪಿಸಿ, ಟ್ಯಾಬ್ಲೆಟ್ಗಳನ್ನು ಆಟಿಕೆಗಳಾಗಿ ಬಳಸದೆ, ಶೈಕ್ಷಣಿಕವಾಗಿ ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣದಲ್ಲಿ ಪ್ರಗತಿ ಸಾಧಿಸುವಂತೆ ಶಾಸಕ ಎಸ್.ಎ. ರವೀಂದ್ರನಾಥ್ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಇಂದು ಏರ್ಪಾಡಾಗಿದ್ದ ಉಚಿತ ಪಿಸಿ ಟ್ಯಾಬ್ಲೆಟ್ ವಿತರಣಾ ಕಾರ್ಯಕ್ರಮ ಮತ್ತು ಸ್ಮಾರ್ಟ್ ಕ್ಲಾಸ್ ಕೊಠಡಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮೂಲಭೂತ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹಣಕಾಸು ತೊಂದರೆಯಿಂದ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿಲ್ಲ. ಈ ಕಾರಣದಿಂದ ಶೇ.80ರಷ್ಟು ಬಡವರು, ಹಿಂದುಳಿದ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದು, ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವನ್ನು ಅಳಿಸಿ ಹಾಕಬೇಕೆಂಬ ಉದ್ದೇಶದಿಂದ ಸರ್ಕಾರ ಉಚಿತವಾಗಿ ಪಿಸಿ ಟ್ಯಾಬ್ಲೆಟ್ ನೀಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದರು.
ಈಗಾಗಲೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತೀ ಹೆಚ್ಚು ರಾಂಕ್ ಪಡೆಯುವ ವಿದ್ಯಾರ್ಥಿಗಳನ್ನು ಬೆಳೆಸುತ್ತಿರುವುದು ಸ್ವಾಗತಾರ್ಹ. ಈ ಹಿರಿಮೆ ರಾಜ್ಯದಾದ್ಯಂತ ಪಸರಿಸಬೇಕೆಂದರೆ ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು.
ನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ಮಾತನಾಡಿ, ನಾನಾ ಹೋರಾಟಗಳ ತಳಪಾಯದಿಂದ ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯದಲ್ಲೇ ಎರಡನೇ ಅತೀ ದೊಡ್ಡ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ 4 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ನೀಡುತ್ತಿರುವುದು ಶ್ಲ್ಯಾಘನೀಯವೆಚಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಶಂಕರ್ ಆರ್. ಶೀಲಿ, ದಿನ ಕಳೆದಂತೆ ಕಾಲೇಜು ಕೂಡ ಬೆಳೆಯುತ್ತಲೇ ಇದೆ. ಈ ಬಾರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶವಾಗುವ ಸಾಧ್ಯತೆ ಇರುವುದರಿಂದ ಶಾಸಕರು ಹಾಗೂ ಮಹಾಪೌರರು ಕಾಲೇಜಿಗೆ ಬೇಕಾದ ಪೀಠೋಪಕರಣ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ವಲಯ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ. ಕೆ.ಸಿ. ವೀರಭದ್ರಯ್ಯ, ನಗರ ಪಾಲಿಕೆ ಸದಸ್ಯ ಜಿ. ಮಂಜುನಾಥ ಗೌಡ, ಐಕ್ಯೂಎಸಿ ಸಂಚಾಲಕ ಪ್ರೊ. ಟಿ. ವೀರೇಶ್, ಐ.ಟಿ. ಸಂಚಾಲಕ ಡಾ. ಜೆ.ಎಮ್. ಮಂಜುನಾಥ ಸೇರಿದಂತೆ ಇತರರು ಇದ್ದರು.