ದಾವಣಗೆರೆ, ಆ.13- ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ತಿರಸ್ಕರಿಸಿ, ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿ ರುವ ವಿದ್ಯಾರ್ಥಿಗಳಿಗೆ ಆ. 19 ರಿಂದ ಸೆ. 3 ರವರೆಗೆ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು, ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಸೂಚಿಸಿದರು.
ದ್ವಿತೀಯ ಪಿಯು ಪರೀಕ್ಷೆ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 368 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಹಾಗೂ ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡುವು ದರ ಜೊತೆಗೆ ಸೋಂಕಿನ ಲಕ್ಷಣಗಳಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು.
ನಗರದ ಮೋತಿ ವೀರಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 166 ವಿದ್ಯಾರ್ಥಿಗಳು, ಡಿ.ಆರ್.ಎಂ. ಸರ್ಕಾರಿ ಪದವಿಪೂರ್ವ ಕಾಲೇಜು-45, ಜಗಳೂರು ಸರ್ಕಾರಿ ಪದವಿಪೂರ್ವ ಕಾಲೇಜು-26, ಹೊನ್ನಾಳಿ ಸರ್ಕಾರಿ ಪದವಿಪೂರ್ವ ಕಾಲೇಜು-84 ಹಾಗೂ ಚನ್ನಗಿರಿ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 47 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 368 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದಾರೆ.
ಈಗಾಗಲೇ ಸೆಕ್ಷನ್ 144 ರಂತೆ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಮುಗಿಯುವವರೆಗೆ ಪ್ರತಿದಿನ ಹಾಗೂ ಪರೀಕ್ಷಾ ಗೌಪ್ಯ ವಸ್ತುಗಳನ್ನು ಇಡಲಾಗಿರುವ ಖಜಾನೆಗೆ ಪೂರ್ಣಾವಧಿ ಪೊಲೀಸ್ ಬಂದೊಬಸ್ತ್ ಮಾಡಲಾಗುವುದು. ಅಲ್ಲದೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪರೀಕ್ಷಾ ದಿನದಂದು ಖಜಾನೆಗಳಿಂದ ಪ್ರಶ್ನೆಪತ್ರಿಕೆ ಸ್ವೀಕೃತಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿತರಣೆ ಮಾಡುವ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆ ಅಳವಡಿಸಲಾಗುವುದು. ಪರೀಕ್ಷಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಯು ಕಡ್ಡಾಯವಾಗಿ ಗುರುತಿನ ಪತ್ರ ಧರಿಸಬೇಕು ಹಾಗೂ ಜಿಲ್ಲಾ ವ್ಯಾಪಿಯಲ್ಲಿರುವ ಕೇಂದ್ರಗಳಿಗೆ ವಿವಿಧ ಇಲಾಖೆಯ ಅಧಿಕಾರಿ ಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಹಾಗೂ ಇತರೆ ವಿದ್ಯುನ್ಮಾನ ಉಪಕರಣ ತರುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ವಿದ್ಯಾರ್ಥಿಗಳು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದರ ಜೊತೆಗೆ, ತಪ್ಪದೇ ಪರೀಕ್ಷಾ ಗುರುತಿನ ಚೀಟಿಯನ್ನು ತರಬೇಕು. ಕೊಠಡಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಅಗತ್ಯವಿದ್ದಲ್ಲಿ ಮನೆಯಿಂದಲೇ ನೀರಿನ ಬಾಟಲಿಯನ್ನು ತರಬೇಕು ಎಂದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಸಿ.ರಿಷ್ಯಂತ್, ಡಿಹೆಚ್‍ಒ ನಾಗರಾಜು, ಡಿಡಿಪಿಯು ಶಿವರಾಜು ಎಂ., ತಹಶಿಲ್ದಾರ್ ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಶ್ನೆಪತ್ರಿಕೆ ವಿತರಣಾಧಿಕಾರಿಗಳು, ಮಾರ್ಗಾಧಿಕಾರಿಗಳು ಹಾಗು ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಸಭೆಯಲ್ಲಿ ಭಾಗವಹಿಸಿದ್ದರು.