ದಾವಣಗೆರೆ, ನ.19- ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗಿದ್ದ ಕೃಷಿ ಕಾಯ್ದೆಯನ್ನು ವಾಪಸ್ ಪಡೆದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಿಸಿತು.
ಜಿಲ್ಲಾ ಕಾಂಗ್ರೆಸ್ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೋರಾಟಕ್ಕೆ ಸಂದ `ಚಾರಿತ್ರಿಕ ಜಯ’ ಎಂದು ಬಣ್ಣಿಸಿ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳು ಎಪಿಎಂಸಿ ಮಾರುಕಟ್ಟೆಗೆ ಮಾರಕವಾಗಿದ್ದವು. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಿರಲಿಲ್ಲ. ದೇಶದ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ, ಕೃಷಿ ಒಪ್ಪಂದ ಸೇರಿದಂತೆ, ಇತರೆ ಅಂಶಗಳು ರೈತರ ಭವಿಷ್ಯವನ್ನೇ ಸಮಾಧಿ ಮಾಡುತ್ತಿದ್ದವು ಎಂದರು.
ದೇಶದ ಅನ್ನದಾತರು ಚಳಿ, ಮಳೆ, ಬಿಸಿಲೆನ್ನದೇ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು. ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ, ಪೊಲೀಸ್ ಬಲ ಪ್ರಯೋಗಿಸಿತ್ತು. ಇದ್ಯಾವುದಕ್ಕೂ ಜಗ್ಗದ ರೈತರು, ತಮ್ಮ ಭವಿಷ್ಯ ರಕ್ಷಣೆಗೆ ಬದ್ಧವಾಗಿ ನಿಂತು, ಸುಮಾರು 600ಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದಾರೆ. ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ಅಂದು ಬ್ರಿಟೀಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ, ದೇಶದಿಂದ ಕಾಲ್ಕಿತ್ತರು.ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿತಿದೆ ಎಂದರು.
ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಸಂಸತ್ತಿನ ಉಭಯ ಸದನಗಳು, ರಾಜ್ಯ ವಿಧಾನ ಮಂಡಲಗಳಲ್ಲಿ ಕರಾಳ ಕೃಷಿ ಕಾಯ್ದೆ ವಿರುದ್ಧ
ಹೋರಾಟ ಮಾಡಿತ್ತು.
ಬೀದಿಗಿಳಿದು ಪ್ರತಿಭಟನೆ ಮಾಡಿತ್ತು. ಕಾಯ್ದೆಯ ಹಿಂದೆ ಅಡಗಿರುವ ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿತ್ತು. ಕೇಂದ್ರ ಸರ್ಕಾರ ಇನ್ನು ಮುಂದಾದರೂ ತನ್ನ ಸರ್ವಾಧಿಕಾರಿ ಮನಃಸ್ಥಿತಿಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಿ, ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕೆಂದು ಆಗ್ರಹಿಸಿದರು.
ಮಾಜಿ ಸಚಿವ ಶಿವಮೂರ್ತಿ ನಾಯ್ಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಹಿರಿಯ ಮುಖಂಡ ಕೆ.ಜಾವೀದ್ ಸಾಬ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಅನಿತಾಬಾಯಿ ಮಾಲತೇಶ್, ಸುಷ್ಮಾ ಪಾಟೀಲ್, ಕವಿತಾ ಚಂದ್ರಶೇಖರ್, ಆಶಾ ಮುರುಳಿ, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಸುನಿತಾ ಭೀಮಣ್ಣ, ಮಂಗಳಮ್ಮ, ಸಲ್ಮಾ, ಉಮಾಶಂಕರ್, ಘನಿ ತಾಹೀರ್, ಸೇವಾದಳದ ಜಬ್ಬಾರ್, ಜಮ್ನಳ್ಳಿ ನಾಗರಾಜ್, ಮಹ್ಮದ್ ಜಿಕ್ರಿಯಾ, ಅಲೆಕ್ಸಾಂಡರ್, ರಾಕೇಶ್, ಮಂಜುನಾಥ್, ಸಿದ್ದೇಶ್, ಯುವರಾಜ್ ಮತ್ತಿತರರು ಉಪಸ್ಥಿತರಿದ್ದರು.