ಹಬ್ಬದ ವೇಳೆ ಮೈ ಮರೆಯಬೇಡಿ

ಹಬ್ಬದ ವೇಳೆ ಮೈ ಮರೆಯಬೇಡಿ - Janathavaniಮಾರ್ಗಸೂಚಿ ಪಾಲಿಸಿ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ, ಅ. 23- ಇದೇ ಅಕ್ಟೋಬರ್ ನಿಂದ ಡಿಸೆಂಬರ್ ತಿಂಗಳಿನವರೆಗೂ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುವ ಭರದಲ್ಲಿ ಸಾರ್ವಜನಿಕರು ಕೋವಿಡ್ ವೈರಸ್ ಸೋಂಕು ಬಾರದಂತೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮನವಿ ಮಾಡಿದ್ದಾರೆ.

ವ್ಯಾಪಾರಸ್ಥರು, ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಈಗಾಗಲೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಎಲ್ಲರೂ ಈ ಮಾರ್ಗಸೂಚಿಯನ್ನು ತಪ್ಪದೇ ಪಾಲಿಸಿ, ರೋಗ ಹರಡುವುದನ್ನು ತಡೆಗಟ್ಟಲು ಸಹಕರಿಸುವಂತೆ ಅವರು ಕೋರಿದ್ದಾರೆ.

ದಸರಾ ಹಬ್ಬವನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು.  100 ಕ್ಕಿಂತ ಹೆಚ್ಚು ಜನರು ಒಮ್ಮೆಲೇ ಸೇರುವಂತಿಲ್ಲ. ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಹಬ್ಬಗಳು ಪೂರಕವಾಗಬೇಕು.  ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದವರು ಹೇಳಿದ್ದಾರೆ.

ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯ ವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಸಿದ್ದಾರೆ.

error: Content is protected !!